ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ಸಾರಿಗೆ ಇಲಾಖೆ ಮುಂದಾಗಿದೆ.
ಯೋಜನೆಯ ದುರ್ಬಳಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಪ್ರಕ್ರಿಯೆಯನ್ನು ಸರ್ಕಾರ ಚುರುಕುಗೊಳಿಸಿದೆ.
ಶಕ್ತಿ ಯೋಜನೆ ಜಾರಿಯಾದ ಬಳಿಕ ನಕಲಿ ಆಧಾರ್ ಕಾರ್ಡ್ಗಳನ್ನು ಬಳಸಿ ಬೇರೆ ರಾಜ್ಯಗಳ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡುತ್ತಿರುವ ಕುರಿತು ದೂರುಗಳು ಕೇಳಿಬಂದಿದ್ದವು. ಇದರಿಂದ ಸಾರಿಗೆ ನಿಗಮಗಳಿಗೆ ಆರ್ಥಿಕ ನಷ್ಟ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.
ಯೋಜನೆಯಡಿ ರಾಜ್ಯದ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಹೊಂದಿರುವ ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಗೆ ಮಾತ್ರ ಸ್ಮಾರ್ಟ್ ಕಾರ್ಡ್ ನೀಡುವ ಪ್ರಸ್ತಾವನೆ ಇದೆ. ಫಲಾನುಭವಿಗಳು ವೋಟರ್ ಐಡಿ ಹಾಗೂ ಆಧಾರ್ ಕಾರ್ಡ್ ಸಲ್ಲಿಸಿ ಕಾರ್ಡ್ ಪಡೆಯಬಹುದಾಗಿದೆ.
ಸ್ಮಾರ್ಟ್ ಕಾರ್ಡ್ನಲ್ಲಿ ಫಲಾನುಭವಿಯ ಹೆಸರು, ಭಾವಚಿತ್ರ, ಆಧಾರ್ ಸಂಖ್ಯೆ ಮತ್ತು ವಿಳಾಸದ ವಿವರಗಳು ಅಳವಡಿಕೆಯಾಗಲಿದ್ದು, ಇತರರಿಗೆ ವರ್ಗಾಯಿಸಲು ಅವಕಾಶ ಇರುವುದಿಲ್ಲ. ರಾಜ್ಯಾದ್ಯಂತ ಸುಮಾರು 3 ಕೋಟಿ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ಪ್ರಾಯೋಗಿಕವಾಗಿ ಮೊದಲ ಹಂತದಲ್ಲಿ ಬೆಂಗಳೂರಿನ ಬಿಎಂಟಿಸಿ ವ್ಯಾಪ್ತಿಯಲ್ಲಿ ಈ ವ್ಯವಸ್ಥೆ ಜಾರಿಯಾಗಲಿದ್ದು, ಬಳಿಕ ಕೆಎಸ್ಆರ್ಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೂ ವಿಸ್ತರಿಸಲಾಗುವುದು.
ಇದಕ್ಕಾಗಿ ಬಿಎಂಟಿಸಿ ಈಗಾಗಲೇ 11 ಸಾವಿರಕ್ಕೂ ಹೆಚ್ಚು ಸುಧಾರಿತ ಇಟಿಎಂ ಯಂತ್ರಗಳನ್ನು ಪಡೆದುಕೊಂಡಿದೆ. ಸ್ಮಾರ್ಟ್ ಕಾರ್ಡ್ಗಳಲ್ಲಿ ಎನ್ಎಫ್ಸಿ ತಂತ್ರಜ್ಞಾನ ಅಳವಡಿಸಲಾಗುತ್ತಿದ್ದು, ಬಸ್ಗಳ ಜೊತೆಗೆ ‘ನಮ್ಮ ಮೆಟ್ರೋ’ ಪ್ರಯಾಣಕ್ಕೂ ಬಳಸಲು ಅವಕಾಶ ಕಲ್ಪಿಸುವ ಯೋಜನೆ ಇದೆ.
ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಸೈಬರ್ ಕೇಂದ್ರಗಳು ಹಾಗೂ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅರ್ಜಿ ಸಲ್ಲಿಸಿ ಕಾರ್ಡ್ ಪಡೆಯಬಹುದಾಗಿದೆ. ಅರ್ಹ ಮಹಿಳೆಯರು ಹಾಗೂ ತೃತೀಯ ಲಿಂಗಿಗಳಿಗೆ ಈ ಕಾರ್ಡ್ಗಳನ್ನು ಉಚಿತವಾಗಿ ವಿತರಿಸಲಾಗುವುದು.
ಸರ್ಕಾರದ ಈ ಕ್ರಮವನ್ನು ಹಲವರು ಸ್ವಾಗತಿಸಿದ್ದು, ಯೋಜನೆಯ ನಿಜವಾದ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪಲು ಇದು ನೆರವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.



