ಬೆಂಗಳೂರು: ರಾಜ್ಯದ ಜನಸಾಮಾನ್ಯರ ಕುಂದುಕೊರತೆಗಳನ್ನು ತ್ವರಿತವಾಗಿ ಆಲಿಸಿ ಪರಿಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಎರಡನೇ ಸಚಿವ ಸಂಪುಟ ಸಭೆಯಲ್ಲಿ ‘ಪ್ರಜಾಸೇವೆ ಇಲಾಖೆ’ ಎಂಬ ಹೊಸ ಇಲಾಖೆಯನ್ನು ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜನರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ಒದಗಿಸುವ ಉದ್ದೇಶದಿಂದ ಈ ಹೊಸ ಇಲಾಖೆಯನ್ನು ರಚಿಸಲಾಗುತ್ತಿದೆ ಎಂದು ತಿಳಿಸಿದರು. ಈ ಇಲಾಖೆ ಕೇವಲ ಅಹವಾಲುಗಳನ್ನು ಸಂಗ್ರಹಿಸುವ ಮಟ್ಟಕ್ಕೆ ಸೀಮಿತವಾಗದೆ, ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದೆ ಎಂದು ಅವರು ಹೇಳಿದರು.
ಸರ್ಕಾರದ ಯೋಜನೆಯಂತೆ, ಪ್ರಜಾಸೇವೆ ಇಲಾಖೆಗೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು. ಜೊತೆಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಇಲಾಖೆಯ ಆಡಳಿತ ಮತ್ತು ಕಾರ್ಯನಿರ್ವಹಣೆಯ ಜವಾಬ್ದಾರಿ ವಹಿಸಲಿದ್ದಾರೆ. ಈ ಇಲಾಖೆ ‘ಪೋಸ್ಟ್‌ಮ್ಯಾನ್’ ರೀತಿಯಲ್ಲಿ ಕೇವಲ ಅರ್ಜಿಗಳನ್ನು ರವಾನಿಸುವ ಕೆಲಸ ಮಾಡುವುದಿಲ್ಲ. ಬದಲಿಗೆ ಜನರ ಅಹವಾಲುಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಇಲಾಖೆಗಳ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಹೊಸ ವ್ಯವಸ್ಥೆಯಡಿ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಚಿವರು ಸ್ಥಳೀಯ ಶಾಸಕರೊಂದಿಗೆ ವಾರಕ್ಕೊಮ್ಮೆ ಸಭೆ ನಡೆಸಲಿದ್ದಾರೆ. ಈ ಸಭೆಗಳಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳ ಕುರಿತು ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಬಳಿಕ ಸಂಬಂಧಪಟ್ಟ ಇಲಾಖೆಗಳ ಮೂಲಕ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ.
ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಬಗ್ಗೆ ಮುಖ್ಯಮಂತ್ರಿ ಈ ಹಿಂದೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ಇದೀಗ ಸಚಿವ ಸಂಪುಟವೂ ಅದಕ್ಕೆ ಅಧಿಕೃತ ಅನುಮೋದನೆ ನೀಡಿದ್ದು, ಇಲಾಖೆಗೆ ‘ಪ್ರಜಾಸೇವೆ ಇಲಾಖೆ’ ಎಂದು ನಾಮಕರಣ ಮಾಡಲಾಗಿದೆ.
ಈ ಇಲಾಖೆಯ ಮೂಲಕ ಸಾರ್ವಜನಿಕರು ತಮ್ಮ ಸಮಸ್ಯೆಗಳು, ಅಹವಾಲುಗಳು ಹಾಗೂ ಬೇಡಿಕೆಗಳನ್ನು ಅಧಿಕೃತವಾಗಿ ಸಲ್ಲಿಸಲು ಅವಕಾಶ ದೊರೆಯಲಿದೆ. ಅರ್ಜಿಗಳನ್ನು ಹೇಗೆ ಸಲ್ಲಿಸಬೇಕು, ಯಾರನ್ನು ಸಂಪರ್ಕಿಸಬೇಕು, ಇಲಾಖೆಯ ಕಾರ್ಯವೈಖರಿ ಹೇಗಿರಲಿದೆ ಎಂಬುದರ ಕುರಿತು ಸರ್ಕಾರ ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿರುವ ಮುಖ್ಯಮಂತ್ರಿ, ರಾಜ್ಯದಲ್ಲಿ ಪ್ರತಿದಿನ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ತಮ್ಮ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸೂಕ್ತ ಪರಿಹಾರ ನೀಡುವ ಉದ್ದೇಶದಿಂದಲೇ ಈ ಹೊಸ ಇಲಾಖೆಯನ್ನು ರಚಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.



