ಬೀದರ್: ಸರ್ಕಾರಿ ಸೇವೆಗಳ ಗುಣಮಟ್ಟ ಮತ್ತು ಆಡಳಿತಾತ್ಮಕ ಕಾರ್ಯವೈಖರಿಯನ್ನು ಪರಿಶೀಲಿಸಲು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ತಂಡ ಬೀದರ್‌ನಲ್ಲಿ ನಡೆಸಿದ ದಿಢೀರ್ ಪರಿಶೀಲನೆ ವೇಳೆ ಆಸ್ಪತ್ರೆ ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿನ ಗಂಭೀರ ಲೋಪಗಳು ಬೆಳಕಿಗೆ ಬಂದಿವೆ.
ಬ್ರಿಮ್ಸ್ ಆಸ್ಪತ್ರೆಯ ವಾರ್ಡ್‌ಗಳಲ್ಲಿ ಮೂಲ ಸೌಲಭ್ಯಗಳ ಕೊರತೆ, ಹಳೆಯ ಹಾಗೂ ಕಳಪೆ ಬೆಡ್‌ಗಳು, ದಿಂಬುಗಳ ದುಸ್ಥಿತಿ, ಕುಡಿಯುವ ನೀರಿನ ಅಭಾವ ಮತ್ತು ರೋಗಿಗಳ ಸಂಬಂಧಿಕರಿಗೆ ಸೂಕ್ತ ವ್ಯವಸ್ಥೆಗಳಿಲ್ಲದಿರುವುದನ್ನು ಕಂಡು ನ್ಯಾಯಮೂರ್ತಿ ವೀರಪ್ಪ ಆಸ್ಪತ್ರೆ ಆಡಳಿತವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಯ ಕಾರ್ಯನಿರ್ವಹಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಅವರು, ನಿಯಮಿತ ಪರಿಶೀಲನೆಯ ಕೊರತೆಯೇ ಇಂತಹ ಪರಿಸ್ಥಿತಿಗೆ ಕಾರಣ ಎಂದು ಅಭಿಪ್ರಾಯಪಟ್ಟರು.
ಪರಿಶೀಲನೆಯ ವೇಳೆ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಸಂಜುಕುಮಾರ್ ಬಳಿ ₹1 ಲಕ್ಷ ನಗದು ಹಾಗೂ ₹1 ಲಕ್ಷ ಮೊತ್ತದ ಚೆಕ್ ಪತ್ತೆಯಾಗಿದ್ದು, ಹಣದ ಮೂಲದ ಬಗ್ಗೆ ಸ್ಪಷ್ಟನೆ ನೀಡಲು ಆತ ವಿಫಲನಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಪತ್ತೆಯಾದ ಹಣವನ್ನು ವಶಪಡಿಸಿಕೊಳ್ಳುವಂತೆ ಹಾಗೂ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ನಂತರ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಉಪ ಲೋಕಾಯುಕ್ತರ ತಂಡ, ಅಲ್ಲಿನ ಅಸ್ವಚ್ಛತೆ, ನಿರ್ವಹಣಾ ವೈಫಲ್ಯ ಹಾಗೂ ಪ್ರಯಾಣಿಕರಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿತು. ಬಸ್ ನಿಲ್ದಾಣದಲ್ಲಿನ ಹೋಟೆಲ್‌ಗಳಲ್ಲಿ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆ ತೃಪ್ತಿಕರವಾಗಿಲ್ಲವೆಂದು ಕಂಡುಬಂದ ಹಿನ್ನೆಲೆ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು.
ಉಪ ಲೋಕಾಯುಕ್ತರ ದಿಢೀರ್ ಪರಿಶೀಲನೆಯಿಂದ ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯವೈಖರಿ ಮತ್ತೆ ಪ್ರಶ್ನೆಗೆ ಒಳಗಾಗಿದೆ.



