ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ಸ್ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಮಾಜಿ ಕೆಪಿಸಿಸಿ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರವನ್ನು ಹಸ್ತಾಂತರಿಸಿದರು.
ಕಾರ್ಯಕ್ರಮಕ್ಕೆ ಸಾಂಕೇತಿಕ ಚಾಲನೆ ನೀಡುವ ಉದ್ದೇಶದಿಂದ ಮೂರು ಚರಕಗಳ ಮೂಲಕ ನೂಲು ನೇಯುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬಳಿಕ ಅಧಿಕಾರ ಹಸ್ತಾಂತರದ ದಾಖಲೆಗಳಿಗೆ ಡಿ.ಕೆ. ಶಿವಕುಮಾರ್ ಹಾಗೂ ಬಿ.ಕೆ. ಹರಿಪ್ರಸಾದ್ ಸಹಿ ಹಾಕುವ ಮೂಲಕ ಪದಗ್ರಹಣ ಪ್ರಕ್ರಿಯೆ ಅಧಿಕೃತವಾಗಿ ಪೂರ್ಣಗೊಂಡಿತು.
ಈ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಡಿ.ಕೆ. ಸುರೇಶ್ ಸೇರಿದಂತೆ ರಾಜ್ಯದ ಹಲವು ಸಚಿವರು, ಶಾಸಕರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಸಚಿವರಾದ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಹೆಚ್.ಕೆ. ಪಾಟೀಲ್, ಕೆ.ಹೆಚ್. ಮುನಿಯಪ್ಪ, ಚೆಲುವರಾಯಸ್ವಾಮಿ, ಎಂ.ಬಿ. ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಝಮೀರ್ ಅಹಮದ್ ಖಾನ್, ಕೆ.ಜೆ. ಜಾರ್ಜ್, ಹೆಚ್.ಸಿ. ಮಹದೇವಪ್ಪ, ತನ್ವೀರ್ ಸೇಠ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು.



