ಹೈದರಾಬಾದ್: ಹೈದರಾಬಾದ್‌ಗೆ ತೆರಳುತ್ತಿದ್ದ ಎಲೆಕ್ಟ್ರಿಕ್ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ.
ಘಟನೆಯಲ್ಲಿ ಬಸ್‌ನಲ್ಲಿದ್ದ 37 ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಎಲೆಕ್ಟ್ರಿಕ್ ಬಸ್ ಕರೀಂನಗರದಿಂದ ಹೈದರಾಬಾದ್ ಕಡೆ ಪ್ರಯಾಣಿಸುತ್ತಿದ್ದ ವೇಳೆ ಎಲ್‌ಎಂಡಿ ಕಾಲೋನಿ ಸಮೀಪದಲ್ಲಿ ಬಸ್‌ನಿಂದ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ ಅನ್ನು ರಸ್ತೆ ಬದಿಗೆ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ.
ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದರೂ, ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರವಾಗಿ ವ್ಯಾಪಿಸಿ ಸಂಪೂರ್ಣ ಬಸ್ ಜ್ವಾಲೆಗೆ ಆಹುತಿಯಾಗಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಆದರೆ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿರುವುದು ವರದಿಯಾಗಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ.



