ಬೆಂಗಳೂರು: ರಾಜ್ಯದ ಕರಾವಳಿ ಭಾಗ ಸೇರಿದಂತೆ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿಯೊಂದಿಗೆ ಲಘು ಹಾಗೂ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮಳೆಯೂ ಸುರಿಯಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಬಿರುಗಾಳಿ ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ 30 ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.



