ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆ ಕಸರತ್ತಿನ ನಡುವೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೊಸಬರಿಗೆ ಅವಕಾಶ ನೀಡುವ ಕುರಿತು ಮಹತ್ವದ ಸುಳಿವು ನೀಡಿದ್ದಾರೆ.
ಬೆಂಗಳೂರಿನ ಶಿವಾನಂದ ಸರ್ಕಲ್ ಸಮೀಪದ ತಮ್ಮ ಸರ್ಕಾರಿ ನಿವಾಸದಲ್ಲಿ ದರ್ಗಾಗಳ ಧರ್ಮಗುರುಗಳನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಹೊಸ ಮುಖಗಳಿಗೆ ಅವಕಾಶ ಕಲ್ಪಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
“ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡುವ ಆಲೋಚನೆ ಪ್ರಗತಿಯಲ್ಲಿದೆ. ನಾನು ಯಾರ ಪ್ರಗತಿ ಅಥವಾ ಅವಕಾಶವನ್ನು ತಡೆಯಲು ಬಯಸುವುದಿಲ್ಲ. ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು ಎನ್ನುವುದೇ ನಮ್ಮ ಆಶಯ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಪ್ರಕ್ರಿಯೆಯ ಸಂಪೂರ್ಣ ಜವಾಬ್ದಾರಿ ಪಕ್ಷದ ಹೈಕಮಾಂಡ್ ಮೇಲಿದೆ ಎಂದು ಸ್ಪಷ್ಟಪಡಿಸಿದರು.
“ಈ ವಿಚಾರವಾಗಿ ಈಗಾಗಲೇ ನವದೆಹಲಿಯಲ್ಲಿ ಪಕ್ಷದ ವರಿಷ್ಠರ ಮಟ್ಟದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡೋಣ” ಎಂದು ಮಾರ್ಮಿಕವಾಗಿ ಉತ್ತರಿಸಿದರು.
ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ಸಚಿವ ಸ್ಥಾನಕ್ಕಾಗಿ ಕಾಯುತ್ತಿರುವ ಆಕಾಂಕ್ಷಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದ್ದು, ರಾಜ್ಯ ಸಚಿವ ಸಂಪುಟದಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿವೆ.



