ಬೆಂಗಳೂರು: ಉತ್ತರ ಪ್ರದೇಶವನ್ನು ದೇಶದ ಪ್ರಮುಖ ಹೂಡಿಕೆ ತಾಣವನ್ನಾಗಿ ರೂಪಿಸುವ ಉದ್ದೇಶದಿಂದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹೂಡಿಕೆದಾರರನ್ನು ಸೆಳೆಯಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಭಾಗವಾಗಿ ‘ಉತ್ತರ ಪ್ರದೇಶ ಗ್ಲೋಬಲ್ ಗ್ರೋತ್ ಡೈಲಾಗ್ 2026’ ಅಡಿಯಲ್ಲಿ ಇಂದು ಬೆಂಗಳೂರಿನಲ್ಲಿ ಹೂಡಿಕೆದಾರರ ರೋಡ್ಶೋ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆ ವಹಿಸಲಿದ್ದು, ದೇಶದ ಹಲವು ಪ್ರಮುಖ ಕೈಗಾರಿಕೋದ್ಯಮಿಗಳು ಹಾಗೂ ಉದ್ಯಮ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಅಭಿವೃದ್ಧಿ, ಉದ್ಯಮ ಸ್ನೇಹಿ ವಾತಾವರಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿರುವ ಹೂಡಿಕೆ ಅವಕಾಶಗಳ ಕುರಿತು ಸುದೀರ್ಘ ಚರ್ಚೆಗಳು ನಡೆಯಲಿವೆ.
ರೋಡ್ಶೋದಲ್ಲಿ ಮೂಲಸೌಕರ್ಯ, ಮಾಹಿತಿ ತಂತ್ರಜ್ಞಾನ (ಐಟಿ) ಮತ್ತು ಐಟಿ ಆಧಾರಿತ ಸೇವೆಗಳು (ITeS), ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs) ಹಾಗೂ ವಿದೇಶಿ ನೇರ ಹೂಡಿಕೆ (FDI) ಕುರಿತಂತೆ ಮೂರು ವಿಶೇಷ ಅಧಿವೇಶನಗಳನ್ನು ಆಯೋಜಿಸಲಾಗಿದೆ.
ಈ ಅಧಿವೇಶನಗಳಲ್ಲಿ ವಿವಿಧ ವಲಯಗಳ ಉದ್ಯಮಿಗಳು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ. ಜೊತೆಗೆ ಉತ್ತರ ಪ್ರದೇಶದಲ್ಲಿನ ಹೂಡಿಕೆ ಮತ್ತು ವ್ಯಾಪಾರ ಅವಕಾಶಗಳನ್ನು ಪರಿಚಯಿಸುವ ಕಿರುಚಿತ್ರವನ್ನು ಸಹ ಪ್ರದರ್ಶಿಸಲಾಗುತ್ತದೆ.
ಈ ಕಾರ್ಯಕ್ರಮದ ಮೂಲಕ ರಾಜ್ಯದಲ್ಲಿ ಹೊಸ ಹೂಡಿಕೆಗಳನ್ನು ಆಕರ್ಷಿಸುವುದು ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಉದ್ಯಮ ವಲಯದೊಂದಿಗೆ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಉತ್ತರ ಪ್ರದೇಶ ಸರ್ಕಾರ ಹೊಂದಿದೆ.



