ಕೊಪ್ಪಳ: ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ಗೇಟ್ಗಳ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುನಿರಾಬಾದ್ನಲ್ಲಿರುವ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಸರ್ಕಾರಿ ಕಾರ್ಯಕ್ರಮ ನಡೆಯುತ್ತಿರುವ ಕಾರಣ ಮುನಿರಾಬಾದ್ ವ್ಯಾಪ್ತಿಯ ಎಲ್ಲ ಶಾಲೆಗಳಿಗೆ ಗುರುವಾರ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ರಜೆಯಿಂದ ಉಂಟಾಗುವ ಶೈಕ್ಷಣಿಕ ನಷ್ಟವನ್ನು ಸರಿದೂಗಿಸಲು ಮತ್ತೊಂದು ದಿನ ಶಾಲೆ ನಡೆಸಲಾಗುವುದು ಎಂದೂ ಸ್ಪಷ್ಟಪಡಿಸಿದ್ದಾರೆ.
ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ಗೇಟ್ಗಳ ಲೋಕಾರ್ಪಣೆ ಸಮಾರಂಭವು ಮುನಿರಾಬಾದ್ನ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ.
ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸಮಾರಂಭಕ್ಕಾಗಿ 10 ಸಾವಿರದಿಂದ 15 ಸಾವಿರ ಜನರು ಕುಳಿತುಕೊಳ್ಳುವಂತೆ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತುಂಗಭದ್ರಾ ಜಲಾಶಯದ 33 ನೂತನ ಕ್ರಸ್ಟ್ಗೇಟ್ಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಾವಿರಾರು ರೈತರು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದ್ದು, ಭದ್ರತೆ ಮತ್ತು ಸಂಚಾರ ವ್ಯವಸ್ಥೆಗಳಿಗೂ ವಿಶೇಷ ಕ್ರಮ ಕೈಗೊಳ್ಳಲಾಗಿದೆ.



