ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದ್ದು, ಅವರ ಆಪ್ತ ಗೆಳೆಯ ಹಾಗೂ ಉದ್ಯಮಿ ವೈಶಾಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜರಾಜೇಶ್ವರಿ ನಗರ (ಆರ್‌ಆರ್ ನಗರ) ವ್ಯಾಪ್ತಿಯಲ್ಲಿರುವ ನಟಿಯ ಮನೆಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ವೈಶಾಕ್ ಆತ್ಮಹತ್ಯೆಗೆ ಶರಣಾಗಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಆರ್‌ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ವೈಶಾಕ್ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿದೆಯೇ ಎಂಬ ಕುರಿತು ಪೊಲೀಸರು ಮಾಹಿತಿ ಬಹಿರಂಗಪಡಿಸಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.



