ಬೆಂಗಳೂರು: ನಗರದ ಹಲಸೂರಿನ ಕಾರ್ ಸ್ಟ್ರೀಟ್‌ನಲ್ಲಿ ನಡೆದ ಬೆಳ್ಳಿ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ತಮಿಳುನಾಡು ಮೂಲದ ಯುವಕನೊಬ್ಬನನ್ನು ಬಂಧಿಸಿದ್ದಾರೆ.
ಬಂಧಿತನನ್ನು ತೇಜು ಎಂದು ಗುರುತಿಸಲಾಗಿದ್ದು, ಆತ ಅಂಗಡಿಯ ಗೋಡೆ ಕೊರೆದು ಸುಮಾರು 10 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿ ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಇದೇ ಮೊದಲ ಬಾರಿಗೆ ಆತ ಇಂತಹ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಮಾಹಿತಿಯೂ ಲಭ್ಯವಾಗಿದೆ.
ಬಂಧಿತನಿಂದ ಸುಮಾರು 5 ಕೆಜಿ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಳಿದ ಬೆಳ್ಳಿ ಆಭರಣಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



