ಕಲಬುರಗಿ: ಒಂದೂವರೆ ವರ್ಷದ ಮಗುವಿನೊಂದಿಗೆ ನಾಲ್ಕು ತಿಂಗಳ ಗರ್ಭಿಣಿ ಮಹಿಳೆಯೊಬ್ಬರು ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಅಂಬಿಕಾ (25) ಹಾಗೂ ಅವರ ಒಂದೂವರೆ ವರ್ಷದ ಪುತ್ರ ಆರಾಧ್ಯ ಎಂದು ಗುರುತಿಸಲಾಗಿದೆ. ಅಂಬಿಕಾ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದುಬಂದಿದೆ.
ಮೂರು ವರ್ಷಗಳ ಹಿಂದೆ ಅಂಬಿಕಾ ಅವರು ವೀರಭದ್ರಪ್ಪ ಎಂಬುವರನ್ನು ವಿವಾಹವಾಗಿದ್ದರು. ಮಂಗಳವಾರ ಬೆಳಿಗ್ಗೆ ಮನೆಯಿಂದ ಹೊರಗೆ ತೆರಳಿದ್ದ ಅವರು ಮರಳಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದರು.
ಈ ವೇಳೆ ಗ್ರಾಮದ ಹೊರವಲಯದಲ್ಲಿರುವ ತೆರೆದ ಬಾವಿಯ ಸಮೀಪ ಅಂಬಿಕಾ ಅವರ ಚಪ್ಪಲಿ ಪತ್ತೆಯಾಗಿದೆ. ಇದರಿಂದ ಅನುಮಾನಗೊಂಡು ಬಾವಿಯಲ್ಲಿ ಶೋಧ ಕಾರ್ಯ ನಡೆಸಿದಾಗ ತಾಯಿ ಮತ್ತು ಮಗುವಿನ ಮೃತದೇಹಗಳು ಪತ್ತೆಯಾಗಿವೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ನರೋಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಈ ದುರ್ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.



