ವಿಜಯಸಾಕ್ಷಿ ಸುದ್ದಿ, ಗದಗ: ಜೂನ್ 27ರಂದು ದೇಶಾದ್ಯಂತ ಆಚರಿಸಲಾಗುವ ರಾಷ್ಟ್ರವ್ಯಾಪಿ ಎಂಎಸ್‌ಎಂಇ (MSME) ದಿನಾಚರಣೆ-2026 ಅಂಗವಾಗಿ ಗದಗ ಜಿಲ್ಲೆಯಲ್ಲಿ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಂಎಸ್‌ಎಂಇ ಕ್ಷೇತ್ರವು ಉದ್ಯೋಗ ಸೃಷ್ಟಿ, ಉದ್ಯಮಶೀಲತೆ ಅಭಿವೃದ್ಧಿ ಹಾಗೂ ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಜೂನ್ 27ರಂದು ನಡೆಯುವ ದಿನಾಚರಣೆಯಲ್ಲಿ ಉದ್ಯಮಿಗಳು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು.
ಬಳಿಕ ಎಂಎಸ್‌ಎಂಇ ದಿನಾಚರಣೆ-2026ರ ಜಾಗೃತಿ ಪೋಸ್ಟರ್‌ಗಳನ್ನು ಅನಾವರಣಗೊಳಿಸಲಾಯಿತು. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಮಹತ್ವ, ಉದ್ಯಮಿಗಳಿಗೆ ಲಭ್ಯವಿರುವ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಬ್ಯಾಂಕಿಂಗ್ ಸೌಲಭ್ಯಗಳ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಎಂ.ವಿ. ಹಾಗೂ ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳು ಉಪಸ್ಥಿತರಿದ್ದರು.



