ಲಕ್ನೋ: ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಪ್ರಕರಣದ ತನಿಖೆ ತೀವ್ರಗೊಂಡಿದೆ.
ವಿಶೇಷ ತನಿಖಾ ತಂಡ ಸಲ್ಲಿಸಿರುವ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ ಉತ್ತರ ಪ್ರದೇಶ ಸರ್ಕಾರ ಪ್ರಕರಣ ದಾಖಲಿಸಲು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೂಲಗಳ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅವರಿಂದ ಹಣ ವಶಪಡಿಸಿಕೊಂಡ ಬಳಿಕ ಅನುಕಲ್ಪ್ ಮಿಶ್ರಾ ಮತ್ತು ಲವಕುಶ್ ಮಿಶ್ರಾ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಕೃಷ್ಣ ಮೋಹನ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 306, 316(5), 317(4), 317(5), 61 ಹಾಗೂ 3(5) ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.
ಎಫ್ಐಆರ್ನಲ್ಲಿ 8 ಪ್ರಮುಖ ಆರೋಪಿಗಳ ಹೆಸರು ಉಲ್ಲೇಖಿಸಲಾಗಿದ್ದು, ಹಲವಾರು ಅಪರಿಚಿತ ವ್ಯಕ್ತಿಗಳನ್ನೂ ಆರೋಪಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಮನೀಶ್ ಯಾದವ್, ರಾಮಶಂಕರ್ ಮಿಶ್ರಾ, ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು, ಸುಭಾಷ್ ಚಂದ್ರ ಮತ್ತು ಕರುಣೇಶ್ ಪಾಂಡೆ ಪ್ರಮುಖ ಆರೋಪಿಗಳಾಗಿದ್ದಾರೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ದೇಣಿಗೆ ಹಣ ದುರ್ಬಳಕೆ ಹಾಗೂ ಕಳ್ಳತನದ ಕುರಿತು ಇನ್ನಷ್ಟು ಮಾಹಿತಿ ಸಂಗ್ರಹಿಸುತ್ತಿದ್ದಾರೆ.



