HomeIndia News9ನೇ ತರಗತಿ ಪಠ್ಯದಲ್ಲಿ ಚುನಾವಣಾ ಆಯೋಗದ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಸೇರ್ಪಡೆ

9ನೇ ತರಗತಿ ಪಠ್ಯದಲ್ಲಿ ಚುನಾವಣಾ ಆಯೋಗದ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಸೇರ್ಪಡೆ

For Dai;y Updates Join Our whatsapp Group

ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಸಕ್ತ ಶೈಕ್ಷಣಿಕ ವರ್ಷಕ್ಕಾಗಿ ಪ್ರಕಟಿಸಿರುವ 9ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಭಾರತೀಯ ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (Special Intensive Revision) ಪ್ರಕ್ರಿಯೆಯನ್ನು ಮೊದಲ ಬಾರಿಗೆ ವಿವರವಾಗಿ ಸೇರಿಸಲಾಗಿದೆ.

‘ಅಂಡರ್ಸ್ಟ್ಯಾಂಡಿಂಗ್ ಸೊಸೈಟಿ: ಇಂಡಿಯಾ ಆಂಡ್ ಬಿಯಾಂಡ್’ ಹೆಸರಿನ ಈ ಹೊಸ ಪಠ್ಯಪುಸ್ತಕದಲ್ಲಿ ಭಾರತೀಯ ಪ್ರಜಾಪ್ರಭುತ್ವದ ವಿವಿಧ ಅಂಶಗಳೊಂದಿಗೆ ತುರ್ತು ಪರಿಸ್ಥಿತಿ ಹಾಗೂ ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ವಿಶೇಷ ಸ್ಥಾನ ನೀಡಲಾಗಿದೆ.

‘ಚುನಾವಣೆಗಳು’ ಎಂಬ ಅಧ್ಯಾಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಕುರಿತು ವಿವರಿಸಲಾಗಿದ್ದು, ಯಾವುದೇ ಅರ್ಹ ನಾಗರಿಕ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ವ್ಯಕ್ತಿಗಳು ಪಟ್ಟಿಯಲ್ಲಿ ಸೇರದಂತೆ ನೋಡಿಕೊಳ್ಳುವುದು ಈ ಪ್ರಕ್ರಿಯೆಯ ಮುಖ್ಯ ಉದ್ದೇಶ ಎಂದು ತಿಳಿಸಲಾಗಿದೆ.

ವಿಶೇಷವಾಗಿ 18 ವರ್ಷ ಪೂರೈಸಿದರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸದ ಯುವ ಮತದಾರರನ್ನು ಗುರುತಿಸಿ ಸೇರ್ಪಡೆಗೊಳಿಸುವಲ್ಲಿ ಈ ಪರಿಷ್ಕರಣೆ ಸಹಕಾರಿಯಾಗುತ್ತದೆ. ಜೊತೆಗೆ ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ನಕಲಿ ಹೆಸರುಗಳು ಹಾಗೂ ಪತ್ತೆಯಾಗದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ವ್ಯವಸ್ಥೆಯನ್ನೂ ಪಠ್ಯದಲ್ಲಿ ವಿವರಿಸಲಾಗಿದೆ.

ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಪರಿಶೀಲನೆ ನಡೆಸಿದ ಬಳಿಕವೇ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸುತ್ತಿದೆ ಎಂಬುದನ್ನೂ ವಿದ್ಯಾರ್ಥಿಗಳಿಗೆ ಪರಿಚಯಿಸಲಾಗಿದೆ.

ಇದೇ ವೇಳೆ, 2024ರ ಲೋಕಸಭಾ ಚುನಾವಣೆಯ ವೇಳೆಗೆ ದೇಶದಲ್ಲಿ 96.8 ಕೋಟಿಗೂ ಹೆಚ್ಚು ನೋಂದಾಯಿತ ಮತದಾರರಿದ್ದರು ಎಂಬ ಅಂಕಿ-ಅಂಶವನ್ನು ನೀಡಲಾಗಿದೆ. ಭಾರತದಲ್ಲಿ ಮಹಿಳೆಯರಿಗೆ ಆರಂಭದಿಂದಲೇ ಸಮಾನ ಮತದಾನದ ಹಕ್ಕು ದೊರೆತಿರುವುದು, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಹಾಗೂ ಗುಜರಾತ್ ಮತ್ತು ಮಹಾರಾಷ್ಟ್ರದ ಮಹಿಳಾ ಸ್ನೇಹಿ ಪಂಚಾಯತ್‌ಗಳ ಉದಾಹರಣೆಗಳನ್ನೂ ಪಠ್ಯದಲ್ಲಿ ಸೇರಿಸಲಾಗಿದೆ.

ಇದಲ್ಲದೆ, ಎಲೆಕ್ಟ್ರಾನಿಕ್ ಮತಯಂತ್ರಗಳು (ಇವಿಎಂ), ಮತದಾರರು ಪರಿಶೀಲಿಸಬಹುದಾದ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್), ಮಾದರಿ ನೀತಿ ಸಂಹಿತೆ ಹಾಗೂ ಮತದಾರರ ಜಾಗೃತಿ ಅಭಿಯಾನಗಳ ಕುರಿತು ಸಹ ಹೊಸ ಪಠ್ಯದಲ್ಲಿ ಸಮಗ್ರ ಮಾಹಿತಿ ನೀಡಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img