ವಿಜಯಸಾಕ್ಷಿ ಸುದ್ದಿ, ನರಗುಂದ:
ತಾಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಕೇಂದ್ರ ಸಂಖ್ಯೆ 43 ರಲ್ಲಿ ಮಾಜಿ ಗ್ರಾ.ಪಂ.ಅಧ್ಯಕ್ಷ ಮುತ್ತು ರಾಯರಡ್ಡಿ, ಜ್ಯೋತಿ ಬೆಳಗಿಸಿ ಮಕ್ಕಳಿಗೆ ಪೋಲಿಯೊ ಹನಿ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೊದಲನೇ ದಿನ ಪೋಲಿಯೊ ಬೂತ್ ಗಳಲ್ಲಿ ಹಾಗೂ ನಂತರದ 2-3 ದಿನಗಳಲ್ಲಿ ಮನೆ-ಮನೆ ಭೇಟಿ ನೀಡುವುದರ ಮೂಲಕ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಪೋಲಿಯ ಹನಿ ನೀಡಲಿದ್ದಾರೆ. ಪೋಷಕರು ತಮ್ಮ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ಕೋರಿದರು.
ಚಿಕ್ಕನರಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ವೈದ್ಯಾಧಿಕಾರಿ ಡಾ.ಪ್ರಶಾಂತ ಮಲ್ಲಾಪೂರ ಮಾತನಾಡಿ, ಚಿಕ್ಕನರಗುಂದ ಗ್ರಾಮದಲ್ಲಿ ಈ ಬಾರಿಯೂ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಶೇ.100ರಷ್ಟು ಯಶಸ್ಸಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇಗಾಗಲೇ ಎರಡು ವರ್ಷಗಳಿಂದ ಕೋವಿಡ್ ಎಂಬ ಮಾಹಾಮರಿ ನಮ್ಮೆಲ್ಲರ ನೆಮ್ಮದಿ ಹಾಳು ಮಾಡಿದ್ದು, ಇದೀಗ ಒಮಿಕ್ರಾನ ಎಂಬ ಹೊಸ ವೈರಸ್ ಕಂಡು ಬಂದಿದೆ. ನೆಗಡಿ, ಕೆಮ್ಮು, ಹಾಗೂ ಜ್ವರದ ಲಕ್ಷಣಗಳು ಕಂಡುಬಂದರೆ ನಿರ್ಲಕ್ಷ್ಯ ಮಾಡದೇ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಲು ಸಲಹೆ ನೀಡಿದರು.
ಪ್ರಾಥಮಿಕ ಸುರಕ್ಷಾ ಅಧಿಕಾರಿ ಕುಮಾರಿ ಶರಾವತಿ ಹಿರೇಮಠ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಇದೇ 27 ರಿಂದ ಮಾ.2 ರವರೆಗೆ ಪಲ್ಸ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ನೂರರಷ್ಟು ಯಶಸ್ಸಿಗೆ ನಮ್ಮ ಇಲಾಖೆ ಹಾಗೂ ಆಶಾ ಕಾರ್ಯಕರ್ತೆಯರು ಸಿದ್ಧರಾಗಿದ್ದು, ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕೆಂದು ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಮಲ್ಲವ್ವ ಮರಿಯಣ್ಣವರ, ಸದಸ್ಯರಾದ ಲಕ್ಷ್ಮಣ ಕಂಬಳಿ, ಶರಣಬಸಪ್ಪ ಹಳೇಮನಿ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ನಿರ್ಮಲಾ ತಳವಾರ ಹಾಗೂ ಪಿಡಿಓ ಶೈನಾಜ್ ಮುಜಾವರ್, ಆರೊಗ್ಯ ಇಲಾಖೆಯ ಸಂತೋಷ ಅಂಬಿಗೇರ, ಅಂಗನವಾಡಿ ಕಾರ್ಯಕರ್ತೆಯರಾದ ಗೀತಾ ಕಾಡದೇವರಮಠ, ಮಂಜುಳಾ ಮೇಟಿ, ಸವಿತಾ ರಾಯರಡ್ಡಿ, ಆಶಾ ಕಾರ್ಯಕರ್ತೆ ಶೋಭಾ ಸುಳ್ಳದ, ಸುಮಾ ಮರಿಯಣ್ಣವರ, ಹಾಗೂ ಮಕ್ಕಳು, ಪೋಷಕರು ಪಾಲ್ಗೊಂಡಿದ್ದರು.