ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಜನರು ಎಚ್ಚರಿಕೆಯಿಂದಿದ್ದು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಇದೀಗ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೂ ವ್ಯಾಪಿಸುವ ಸಾಧ್ಯತೆ ಇದೆ. ಜೂನ್ 27ರಂದು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.
ಈ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಇದೇ ರೀತಿಯ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದೇ ವೇಳೆ, ಜೂನ್ 25ರ ಬೆಳಿಗ್ಗೆ 8.30ರಿಂದ ಜೂನ್ 26ರ ಬೆಳಿಗ್ಗೆ 8.30ರವರೆಗೆ ವಿಜಯಪುರ ಜಿಲ್ಲೆಯ ಚಡಚಣದಲ್ಲಿ 72.2 ಮಿಲಿ ಮೀಟರ್ ಮಳೆಯಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಮಳೆ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಜಲವಳ್ಳಿಯಲ್ಲಿ 70.5 ಮಿಲಿ ಮೀಟರ್, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟುವಿನಲ್ಲಿ 50.5 ಮಿಲಿ ಮೀಟರ್ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಇನ್ನಾದಲ್ಲಿ 46 ಮಿಲಿ ಮೀಟರ್ ಮಳೆಯಾಗಿದೆ.
ಮಳೆ ತೀವ್ರಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ನಿವಾಸಿಗಳು, ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.