Home Gadag News ಮಲೇರಿಯಾ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರ ಅಗತ್ಯ: ಡಾ. ಬಿ.ಎಸ್. ಭಜಂತ್ರಿ

ಮಲೇರಿಯಾ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರ ಅಗತ್ಯ: ಡಾ. ಬಿ.ಎಸ್. ಭಜಂತ್ರಿ

0
ಮಲೇರಿಯಾ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರ ಅಗತ್ಯ: ಡಾ. ಬಿ.ಎಸ್. ಭಜಂತ್ರಿ
Spread the love

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮಲೇರಿಯಾ ನಿರ್ಮೂಲನೆಯ ಗುರಿ ಸಮೀಪಿಸುತ್ತಿದ್ದು, ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಮಲೇರಿಯಾ ಸೇರಿದಂತೆ ಸೊಳ್ಳೆಜನ್ಯ ರೋಗಗಳನ್ನು ಸಂಪೂರ್ಣ ನಿಯಂತ್ರಿಸಲು ಸಾಧ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ಎಸ್. ಭಜಂತ್ರಿ ಹೇಳಿದರು.

ಸಮೀಪದ ಅಬ್ಬಿಗೇರಿ ಗ್ರಾಮದ ಶ್ರೀ ಅನ್ನದಾನೇಶ್ವರ ವಿಜಯ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಘಟಕ, ಜಿಲ್ಲಾ ಐಇಸಿ ವಿಭಾಗ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಅಬ್ಬಿಗೇರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಳೆಗಾಲದಲ್ಲಿ ನಿಂತ ನೀರಿನಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುವುದರಿಂದ ಮಲೇರಿಯಾ, ಡೆಂಗ್ಯೂ ಹಾಗೂ ಚಿಕುನ್‌ಗುನ್ಯಾ ರೋಗಗಳ ಹರಡುವಿಕೆ ಹೆಚ್ಚಾಗುತ್ತದೆ. ಆದ್ದರಿಂದ ಮನೆ ಮತ್ತು ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಪರಿಸರ ಸ್ವಚ್ಛತೆ ಕಾಪಾಡುವುದು ಹಾಗೂ ಸೊಳ್ಳೆಮುಕ್ತ ವಾತಾವರಣ ನಿರ್ಮಿಸುವುದು ಅತ್ಯಗತ್ಯ ಎಂದು ತಿಳಿಸಿದರು.

ಮುಖ್ಯ ಉಪನ್ಯಾಸಕಿ ಜಿಲ್ಲಾ ಕೀಟಶಾಸ್ತ್ರಜ್ಞೆ ಅನ್ನಪೂರ್ಣ ಶೆಟ್ಟರ ಮಾತನಾಡಿ, ವೈಯಕ್ತಿಕ ರಕ್ಷಣಾ ಕ್ರಮಗಳು, ಜೈವಿಕ ಹಾಗೂ ರಾಸಾಯನಿಕ ನಿಯಂತ್ರಣ ವಿಧಾನಗಳ ಮೂಲಕ ಸೊಳ್ಳೆಗಳ ನಿಯಂತ್ರಣ ಸಾಧ್ಯ. ಆರೋಗ್ಯ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಮಲೇರಿಯಾ ನಿರ್ಮೂಲನೆ ಸಾಧ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಡಾ. ಆರ್.ಬಿ. ಬಸವರೆಡ್ಡಿ ಆರೋಗ್ಯ ಇಲಾಖೆಯ ಸಲಹೆಗಳನ್ನು ಪಾಲಿಸಿ ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರು, ವೈದ್ಯಾಧಿಕಾರಿಗಳಾದ ಡಾ. ಪ್ರಕಾಶ ಕಮತೆ, ಡಾ. ಮಹೇಶ್ ಹೊಸಕೇರಿ, ಡಾ. ನಾಗರಾಜ ಸತ್ತಿಗೇರಿ, ಶಿಕ್ಷಣ ಇಲಾಖೆಯ ಈಶ್ವರ ಕುರಿ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮಲೇರಿಯಾ ಹರಡುವಿಕೆ, ಮುಂಜಾಗ್ರತಾ ಕ್ರಮಗಳು ಹಾಗೂ ಸ್ವಚ್ಛತೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಯಿತು.

“ಮನೆ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಂಡು ನೀರು ನಿಲ್ಲದಂತೆ ನೋಡಿಕೊಂಡರೆ ಮಲೇರಿಯಾ ಸೇರಿದಂತೆ ಸೊಳ್ಳೆಜನ್ಯ ರೋಗಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು.”

ಡಾ. ಬಿ.ಎಸ್. ಭಜಂತ್ರಿ, ತಾಲೂಕು ಆರೋಗ್ಯಾಧಿಕಾರಿ


Spread the love

LEAVE A REPLY

Please enter your comment!
Please enter your name here