ಬೀದರ್, ಜೂ.29: ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದ ಪತ್ನಿಯನ್ನು ಕಾಡಿಗೆ ಕರೆದುಕೊಂಡು ಹೋಗಿ ಕಬ್ಬಿಣದ ರಾಡ್ನಿಂದ ಬರ್ಬರವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಮೃತ ದುರ್ದೈವಿ. ಆರೋಪಿ ಪತಿ ಭಗವತ್ ಜ್ಞಾನೇಶ್ವರ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಈತನ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.
ಎರಡು ವರ್ಷಗಳ ಹಿಂದೆ ಸಂಜನಾ ಮತ್ತು ಭಗವತ್ ವಿವಾಹವಾಗಿದ್ದರು. ದಂಪತಿ ಬೀದರ್ ನಗರದ ಶಿವನಗರದಲ್ಲಿ ವಾಸವಾಗಿದ್ದರು. ಈ ನಡುವೆ ಭಗವತ್ ಪಕ್ಕದ ಮನೆಯ ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎನ್ನಲಾಗಿದೆ. ಇದನ್ನು ಪತ್ನಿ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿತ್ತು.
ಬಳಿಕ ಸಂಜನಾಳನ್ನು ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಸಮೀಪದ ಅರಣ್ಯ ಪ್ರದೇಶಕ್ಕೆ ಕಾರಿನಲ್ಲಿ ಕರೆದೊಯ್ದ ಆರೋಪಿ, ಕಬ್ಬಿಣದ ರಾಡ್ನಿಂದ ತಲೆ ಹಾಗೂ ಕತ್ತಿನ ಭಾಗಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ತೀವ್ರವಾಗಿ ಗಾಯಗೊಂಡಿದ್ದ ಸಂಜನಾಳನ್ನು ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಬ್ರಿಮ್ಸ್ ಶವಾಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



