ದಾವಣಗೆರೆ: ಇಲ್ಲಿನ ಚಿಗಟೇರಿಯಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ ಕಾರಣ ಭಾರಿ ದುರಂತವೊಂದು ತಪ್ಪಿದೆ.
ಅಗ್ನಿಶಾಮಕ ಸಿಬ್ಬಂದಿ ಆಸ್ಪತ್ರೆಯ ಗಾಜು ಒಡೆದು ಒಳನುಗ್ಗಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಆಪರೇಷನ್ ಥಿಯೇಟರ್‌ನಲ್ಲಿ ಇನ್ನೂ ಹಲವು ಆಕ್ಸಿಜನ್ ಸಿಲಿಂಡರ್‌ಗಳಿದ್ದವು. ಅವು ಸ್ಫೋಟಗೊಂಡಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳು ಬೆಂಕಿಗಾಹುತಿಯಾಗಿವೆ. ಸಿಲಿಂಡರ್ ಸ್ಫೋಟ ಸಮಯದಲ್ಲಿ ಯಾವುದೇ ರೋಗಿಗಳು ಒಳಗೆ ಇರಲಿಲ್ಲ. ಇಂದು ಒಂಬತ್ತು ರೋಗಿಗಳಿಗೆ ಶಸ್ತ್ರಚಿಕಿತ್ಸೆ ನಡೆಯಬೇಕಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯಲ್ಲಿದ್ದ 22 ವೈದ್ಯಕೀಯ ಸಿಬ್ಬಂದಿ, ರೋಗಿಗಳು ಹಾಗೂ ಸಂಬಂಧಿಕರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಘಟನೆಯಿಂದ ದೊಡ್ಡ ಅನಾಹುತ ತಪ್ಪಿರುವುದರಿಂದ ಸ್ಥಳೀಯರು ಮತ್ತು ಆಸ್ಪತ್ರೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ.



