ವಿಜಯಸಾಕ್ಷಿ ಸುದ್ದಿ, ಗದಗ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್–2026) ಪ್ರಕ್ರಿಯೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ಸಕ್ರಿಯವಾಗಿ ಭಾಗವಹಿಸಿ, ಮತದಾರರ ಪಟ್ಟಿಯನ್ನು ನಿಖರ ಹಾಗೂ ದೋಷರಹಿತಗೊಳಿಸುವ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕರೆ ನೀಡಿದರು.
ನಗರದ ತ್ರಿವಿಧ ದಾಸೋಹ ಮಠವಾದ ವೀರೇಶ್ವರ ಪುಣ್ಯಾಶ್ರಮದಲ್ಲಿ ಮಂಗಳವಾರ ಕಲ್ಲಯ್ಯಜ್ಜನವರಿಗೆ ಎಸ್‌ಐಆರ್ ಎನ್ಯೂಮರೇಶನ್ ನಮೂನೆಯನ್ನು ವಿತರಿಸುವ ಮೂಲಕ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಮನೆ-ಮನೆ ಭೇಟಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಎಸ್‌ಐಆರ್ (Special Intensive Revision) ಪ್ರಕ್ರಿಯೆಯ ಉದ್ದೇಶ, ಮಹತ್ವ ಹಾಗೂ ಅನುಸರಿಸಬೇಕಾದ ಕ್ರಮಗಳ ಕುರಿತು ವಿವರಿಸಿದ ಜಿಲ್ಲಾಧಿಕಾರಿಗಳು, ಮತದಾರರ ಪಟ್ಟಿಯಲ್ಲಿ ಹೆಸರುಗಳ ನಿಖರತೆ ಕಾಪಾಡುವುದು, ಅರ್ಹ ಮತದಾರರ ಹೆಸರು ಸೇರ್ಪಡೆ ಮಾಡುವುದು, ಅನರ್ಹ ಅಥವಾ ಪುನರಾವರ್ತಿತ ಹೆಸರುಗಳನ್ನು ತೆಗೆದುಹಾಕುವುದು ಹಾಗೂ ಅಗತ್ಯ ದಾಖಲೆಗಳ ಆಧಾರದಲ್ಲಿ ತಿದ್ದುಪಡಿ ಮಾಡುವುದು ಈ ಪ್ರಕ್ರಿಯೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಅಡಿಪಾಯವಾಗಿದ್ದು, ಪ್ರತಿಯೊಬ್ಬ ನಾಗರಿಕರು ತಮ್ಮ ಮಾಹಿತಿಯನ್ನು ಪರಿಶೀಲಿಸಿ ಅಗತ್ಯವಿದ್ದಲ್ಲಿ ಎಸ್‌ಐಆರ್ ನಮೂನೆಗಳನ್ನು ಭರ್ತಿ ಮಾಡಿ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಬೇಕು. ಇದರಿಂದ ಪಾರದರ್ಶಕ ಹಾಗೂ ವಿಶ್ವಾಸಾರ್ಹ ಮತದಾರರ ಪಟ್ಟಿ ಸಿದ್ಧವಾಗಲಿದೆ ಎಂದು ಹೇಳಿದರು.
ಧಾರ್ಮಿಕ, ಸಾಮಾಜಿಕ ಹಾಗೂ ಸಾರ್ವಜನಿಕ ಸಂಸ್ಥೆಗಳ ಮುಖಂಡರು ಎಸ್‌ಐಆರ್ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ಸಕ್ರಿಯವಾಗಿ ಕೈಜೋಡಿಸಬೇಕು. ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಮನವಿ ಮಾಡಿದರು.
ಜೂನ್ 30ರಿಂದ ಜುಲೈ 29ರವರೆಗೆ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ಹಾಗೂ ಪರಿಶೀಲನೆ ನಡೆಸಲಿದ್ದು, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಆಯೋಗದ ಮಾರ್ಗಸೂಚಿಯಂತೆ 2002ರ ಮತದಾರರ ಪಟ್ಟಿಯನ್ನು ಮಾನದಂಡವಾಗಿಟ್ಟುಕೊಂಡು, ಪ್ರಸ್ತುತ ಇರುವ 2025ರ ಮತದಾರರ ಪಟ್ಟಿಯೊಂದಿಗೆ ಹೋಲಿಕೆ ಹಾಗೂ ಮ್ಯಾಪಿಂಗ್ ಪ್ರಕ್ರಿಯೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಶೇ.94ಕ್ಕೂ ಅಧಿಕ ನೈಜ ಮತದಾರರನ್ನು ಗುರುತಿಸಿ, ಕುಟುಂಬಗಳ ಲಿಂಕೇಜ್‌ನೊಂದಿಗೆ ಹೊಂದಾಣಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಅಗತ್ಯ ದಾಖಲೆಗಳೊಂದಿಗೆ ಹೆಸರು ಸೇರ್ಪಡೆ
ಕುಟುಂಬದ ಮುಖ್ಯಸ್ಥರ ಹೆಸರು 2002ರ ಮತದಾರರ ಪಟ್ಟಿಯಲ್ಲಿದ್ದರೆ, ಹೊಸದಾಗಿ ಅರ್ಹತೆ ಪಡೆದ ಕುಟುಂಬ ಸದಸ್ಯರ ಹೆಸರು ಸೇರ್ಪಡೆ ಸುಲಭವಾಗಲಿದೆ. ಮದುವೆಯಾಗಿ ಅಥವಾ ವಲಸೆ ಬಂದು ನೆಲೆಸಿರುವವರ ಹೆಸರು ಹಿಂದಿನ ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ಅವರು ಈ ಹಿಂದೆ ವಾಸವಾಗಿದ್ದ ಸ್ಥಳದ ಮತದಾರರ ಪಟ್ಟಿಯ ಮಾಹಿತಿಯ ಆಧಾರದ ಮೇಲೆ ಹೆಸರು ಸೇರಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮ್ಯಾಪಿಂಗ್ ಆಗದಿರುವವರು ಮನೆ ಗಣತಿ ನಮೂನೆಯೊಂದಿಗೆ ಚುನಾವಣಾ ಆಯೋಗ ನಿಗದಿಪಡಿಸಿರುವ ದಾಖಲೆಗಳಾದ ಸರ್ಕಾರಿ ಗುರುತಿನ ಚೀಟಿ, ಪಿಂಚಣಿ ದಾಖಲೆ, ಜನನ ಪ್ರಮಾಣ ಪತ್ರ, ಪಾಸ್‌ಪೋರ್ಟ್, ಎಸ್‌ಎಸ್‌ಎಲ್‌ಸಿ ಪ್ರಮಾಣ ಪತ್ರ, ಶಾಶ್ವತ ನಿವಾಸ ಪ್ರಮಾಣ ಪತ್ರ, ಅರಣ್ಯ ಹಕ್ಕು ಪತ್ರ, ಜಾತಿ ಪ್ರಮಾಣ ಪತ್ರ, ಕುಟುಂಬ ನೋಂದಣಿ, ಭೂಮಿ ಅಥವಾ ಮನೆ ಹಂಚಿಕೆ ದಾಖಲೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಬಹುದು. ಆಧಾರ್ ಕಾರ್ಡ್ ಅನ್ನು ಗುರುತಿನ ಪುರಾವೆಯಾಗಿ ಮಾತ್ರ ಬಳಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಸೀಲ್ದಾರ್ ಶ್ರೀನಿವಾಸ್ ಮೂರ್ತಿ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.
“ಚುನಾವಣಾ ಆಯೋಗದ ಈ ಮಹತ್ವದ ಕಾರ್ಯಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಸಮಾಜದ ಎಲ್ಲ ವರ್ಗದ ಜನರು ತಮ್ಮ ಮತದಾರರ ಮಾಹಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಜವಾಬ್ದಾರಿಯುತ ನಾಗರಿಕರಾಗಿ ಕರ್ತವ್ಯ ನಿರ್ವಹಿಸಬೇಕು.”
ಕಲ್ಲಯ್ಯಜ್ಜನವರು, ವೀರೇಶ್ವರ ಪುಣ್ಯಾಶ್ರಮ, ಗದಗ
ಅಕ್ಟೋಬರ್ 7ಕ್ಕೆ ಅಂತಿಮ ಮತದಾರರ ಪಟ್ಟಿ
ಮನೆ ಗಣತಿ ಪೂರ್ಣಗೊಂಡ ಬಳಿಕ ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ನಂತರ ಎರಡು ತಿಂಗಳ ಕಾಲ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 3ರೊಳಗೆ ಸಾರ್ವಜನಿಕರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಆಕ್ಷೇಪಣೆಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಆ ಬಳಿಕ ಪರಿಷ್ಕೃತ ಮತದಾರರ ಪಟ್ಟಿಯೇ ಅಧಿಕೃತವಾಗಿ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ತಿಳಿಸಿದರು.



