ವಿಜಯಸಾಕ್ಷಿ ಸುದ್ದಿ, ಗದಗ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್–2026) ಎನ್ಯೂಮರೇಶನ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಮಂಗಳವಾರ ವಿವಿಧ ಕ್ಷೇತ್ರಗಳ ಗಣ್ಯರಿಗೆ ಎಸ್‌ಐಆರ್ ಎನ್ಯೂಮರೇಶನ್ ನಮೂನೆಗಳನ್ನು ವಿತರಿಸುವ ಮೂಲಕ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಿವಾನಂದ ಮಠದ ಪೂಜ್ಯ ಶಿವಾನಂದ ಶ್ರೀಗಳು, ಅಂತಾರಾಷ್ಟ್ರೀಯ ಕುಸ್ತಿಪಟು ಕು. ಪ್ರೇಮಾ ಹುಚ್ಚಣ್ಣನವರ ಹಾಗೂ ಪ್ರಮುಖರಾದ ಅಬೂಬಕರ ಕಟ್ಟಿಮನಿ ಅವರಿಗೆ ಜಿಲ್ಲಾಧಿಕಾರಿಗಳು ಎಸ್‌ಐಆರ್ ಎನ್ಯೂಮರೇಶನ್ ನಮೂನೆಗಳನ್ನು ವಿತರಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಯಶಸ್ವಿಯಾಗಲು ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದೆ. ಪ್ರತಿಯೊಬ್ಬ ಅರ್ಹ ಮತದಾರರು ಎಸ್‌ಐಆರ್ ಎನ್ಯೂಮರೇಶನ್ ನಮೂನೆಯನ್ನು ಸಮರ್ಪಕವಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಸಲ್ಲಿಸುವ ಮೂಲಕ ಚುನಾವಣಾ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ಸಮರ್ಪಕವಾಗಿಸಲು ಕೈಜೋಡಿಸಬೇಕು ಎಂದು ಕರೆ ನೀಡಿದರು.
ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಈ ಅಭಿಯಾನದಲ್ಲಿ ಭಾಗವಹಿಸುವುದರಿಂದ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ಜೂನ್ 30ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ.) ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಹಾಗೂ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ 2002ರ ಮತದಾರರ ಪಟ್ಟಿಯನ್ನು ಮಾನದಂಡವಾಗಿಟ್ಟುಕೊಂಡು, ಪ್ರಸ್ತುತ ಇರುವ 2025ರ ಮತದಾರರ ಪಟ್ಟಿಯೊಂದಿಗೆ ಹೋಲಿಕೆ ಹಾಗೂ ಮ್ಯಾಪಿಂಗ್ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಸೀಲ್ದಾರ್ ಶ್ರೀನಿವಾಸ್ ಮೂರ್ತಿ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.
“ಪ್ರತಿಯೊಬ್ಬ ಅರ್ಹ ಮತದಾರರು ಎಸ್‌ಐಆರ್ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದಾಗ ಮಾತ್ರ ಮತದಾರರ ಪಟ್ಟಿ ಮತ್ತಷ್ಟು ನಿಖರ ಹಾಗೂ ವಿಶ್ವಾಸಾರ್ಹವಾಗಲಿದೆ.”
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್



