ರಾಮನಗರ/ಯಾದಗಿರಿ: ಜೀವನೋಪಾಯಕ್ಕಾಗಿ ಯಾದಗಿರಿಯಿಂದ ಬೆಂಗಳೂರಿಗೆ ವಲಸೆ ಬಂದಿದ್ದ ಕಾರ್ಮಿಕನೊಬ್ಬ ರಾಮನಗರ ಜಿಲ್ಲೆಯ ಮಾದಪಟ್ಟಣ ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ಬಂಡೆ ಕುಸಿತ ದುರಂತಕ್ಕೆ ಬಲಿಯಾಗಿದ್ದಾನೆ.
ಮೃತರನ್ನು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಡಿಹಾಳ ದೇವಸು ನಾಯಕ ತಾಂಡಾದ ನಿವಾಸಿ ರಾಮು ನಾಯಕ (45) ಎಂದು ಗುರುತಿಸಲಾಗಿದೆ.
ಸುಮಾರು ನಾಲ್ಕು ವರ್ಷಗಳ ಹಿಂದೆ ಕುಟುಂಬದ ಬದುಕು ಕಟ್ಟಿಕೊಳ್ಳುವ ಉದ್ದೇಶದಿಂದ ರಾಮು ನಾಯಕ ಬೆಂಗಳೂರಿಗೆ ವಲಸೆ ಬಂದಿದ್ದರು. ವಿವಿಧ ಕೂಲಿ ಕೆಲಸಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಅವರು, ಇತ್ತೀಚೆಗೆ ಮಾದಪಟ್ಟಣದ ಕಲ್ಲು ಕ್ವಾರಿಯಲ್ಲಿ ಬಿಹಾರ ಮೂಲದ ಕಾರ್ಮಿಕರೊಂದಿಗೆ ಕೆಲಸ ಮಾಡುತ್ತಿದ್ದರು.
ಬುಧವಾರ (ಜು.2) ಕ್ವಾರಿಯಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಏಕಾಏಕಿ ಬೃಹತ್ ಬಂಡೆ ಕುಸಿದ ಪರಿಣಾಮ ರಾಮು ನಾಯಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಹಲವು ಕಾರ್ಮಿಕರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.
ಹೊಟ್ಟೆಪಾಡಿಗಾಗಿ ಊರು ಬಿಟ್ಟು ಬಂದಿದ್ದ ರಾಮು ನಾಯಕ ಕ್ವಾರಿಯಲ್ಲೇ ಪ್ರಾಣ ಕಳೆದುಕೊಂಡಿರುವ ಘಟನೆ ಕುಟುಂಬದವರನ್ನು ಹಾಗೂ ಗ್ರಾಮಸ್ಥರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.



