ವಿಜಯಸಾಕ್ಷಿ ಸುದ್ದಿ, ಧಾರವಾಡ: ಗ್ರಾಮೀಣ ಭಾಗದ ಜನರಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಒದಗಿಸುವುದು ಅಧಿಕಾರಿಗಳ ಮೊದಲ ಆದ್ಯತೆಯಾಗಬೇಕು. ನೀರಿನ ಗುಣಮಟ್ಟ ಪರಿಶೀಲನೆಯಲ್ಲಿ ಯಾವುದೇ ನಿರ್ಲಕ್ಷ್ಯ ಕಂಡುಬಂದರೂ ಅಥವಾ ಕಲುಷಿತ ನೀರು ಪೂರೈಕೆಯಾದರೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಹಾಗೂ ಜಿಲ್ಲಾ ತಾಂತ್ರಿಕ ಅನುಮೋದನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಜನರು ಬಳಸುವ ಕುಡಿಯುವ ನೀರಿನ ಗುಣಮಟ್ಟವನ್ನು ಕಾಲಕಾಲಕ್ಕೆ ಪರೀಕ್ಷಿಸಬೇಕು. ಬೋರ್ವೆಲ್ ನೀರನ್ನು ಕುಡಿಯಲು ಬಳಸುವ ಕಡೆಗಳಲ್ಲಿ ಅಗತ್ಯ ಸೂಚನಾ ಫಲಕ ಅಳವಡಿಸಬೇಕು. ಶಾಲೆಗಳು, ಅಂಗನವಾಡಿಗಳು ಹಾಗೂ ಮನೆಗಳಿಗೆ ಸಮರ್ಪಕ ಪ್ರಮಾಣದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಈ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಯ ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಈಗಾಗಲೇ ದುರಸ್ತಿ ಕಾರ್ಯ ನಡೆಯುತ್ತಿರುವ ಘಟಕಗಳ ಕಾಮಗಾರಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು. ಗಡುವಿನೊಳಗೆ ಕೆಲಸ ಮುಗಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಜಲ ಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಅಧಿಕಾರಿಗಳು ನಿರಂತರವಾಗಿ ಪರಾಮರ್ಶಿಸಬೇಕು. ಗ್ರಾಮಗಳಲ್ಲಿರುವ ಮೇಲ್ಮಟ್ಟದ ನೀರಿನ ಟ್ಯಾಂಕ್ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ, ಜನರಿಗೆ ಗುಣಮಟ್ಟದ ಕುಡಿಯುವ ನೀರು ತಲುಪುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ತಾಲೂಕು ಮಟ್ಟದ ಸಭೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಮುಂದಿನ ಸಭೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮಗ್ರ ಮಾಹಿತಿ ಹಾಗೂ ಪ್ರಗತಿ ವರದಿಯೊಂದಿಗೆ ಹಾಜರಾಗಬೇಕು ಎಂದು ಭುವನೇಶ ಪಾಟೀಲ ನಿರ್ದೇಶನ ನೀಡಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಜಗದೀಶ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪರಶುರಾಮ ಎಫ್.ಕೆ., ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ. ಕಮಲಾ ಬೈಲೂರು, ಎಲ್ಲ ತಾಲೂಕು ಪಂಚಾಯತ್ಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಯೋಜನೆ ಮಾತ್ರವಲ್ಲ, ಅಧಿಕಾರಿಗಳ ಹೊಣೆಗಾರಿಕೆಯೂ ಹೌದು. ನಿರ್ಲಕ್ಷ್ಯಕ್ಕೆ ಯಾವುದೇ ಕ್ಷಮೆ ಇಲ್ಲ.”
ಭುವನೇಶ ಪಾಟೀಲ, ಸಿಇಒ, ಜಿಲ್ಲಾ ಪಂಚಾಯತ್ ಧಾರವಾಡ



