ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ 27 ವಾರ್ಡ್ಗಳಲ್ಲಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಕೈಗೊಂಡಿರುವ ಪ್ರತ್ಯೇಕ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ತುರ್ತು ಮಧ್ಯಪ್ರವೇಶ ಮಾಡುವಂತೆ ಕೇಂದ್ರ ಚುನಾವಣಾ ಆಯೋಗವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಈ ಸಂಬಂಧ ಅವರು ಎರಡು ಬಾರಿ ಪತ್ರ ಬರೆದು ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಶೋಭಾ ಕರಂದ್ಲಾಜೆ, ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಜಿಬಿಎ ವ್ಯಾಪ್ತಿಯ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತ್ಯೇಕ ವೇಳಾಪಟ್ಟಿ ಹಾಗೂ ವಿಭಿನ್ನ ಕಟ್-ಆಫ್ ದಿನಾಂಕಗಳನ್ನು ನಿಗದಿಪಡಿಸಿ ಸಮಾನಾಂತರ ಎಸ್ಐಆರ್ ಪ್ರಕ್ರಿಯೆ ಆರಂಭಿಸಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
ಇಂತಹ ಸಮಾನಾಂತರ ಪರಿಷ್ಕರಣೆ ಪ್ರಕ್ರಿಯೆಯಿಂದ ಮತದಾರರು, ರಾಜಕೀಯ ಪಕ್ಷಗಳು ಹಾಗೂ ಚುನಾವಣಾ ಅಧಿಕಾರಿಗಳಲ್ಲಿ ಗೊಂದಲ ಉಂಟಾಗುವ ಸಾಧ್ಯತೆಯಿದ್ದು, ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಗೂ ಧಕ್ಕೆ ಉಂಟಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಜನಪ್ರತಿನಿಧಿತ್ವ ಕಾಯ್ದೆ-1950 ಹಾಗೂ ಮತದಾರರ ನೋಂದಣಿ ನಿಯಮಗಳು-1960ರ ಪ್ರಕಾರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಸಿದ್ಧಪಡಿಸುವುದು, ಪರಿಷ್ಕರಿಸುವುದು, ಹೆಸರು ಸೇರ್ಪಡೆ ಮತ್ತು ತೆಗೆದುಹಾಕುವ ಅಧಿಕಾರ ಭಾರತ ಚುನಾವಣಾ ಆಯೋಗ ನೇಮಕ ಮಾಡುವ ಎಲೆಕ್ಟೋರಲ್ ರಿಜಿಸ್ಟ್ರೇಷನ್ ಅಧಿಕಾರಿಗಳಿಗೆ (ಇಆರ್ಒ) ಮಾತ್ರ ಇದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಭಾರತ ಚುನಾವಣಾ ಆಯೋಗ ಸಿದ್ಧಪಡಿಸುವ ಮತದಾರರ ಪಟ್ಟಿಯೇ ವಿಧಾನಸಭಾ ಕ್ಷೇತ್ರಗಳ ಅಧಿಕೃತ ಕಾನೂನುಬದ್ಧ ಮತದಾರರ ಪಟ್ಟಿಯಾಗಿದ್ದು, ಬಳಿಕ ಅದನ್ನೇ ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಳಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಸಂವಿಧಾನದ ಅನುಚ್ಛೇದ 243K ಹಾಗೂ 243ZA ಅಡಿಯಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಜವಾಬ್ದಾರಿ ಮಾತ್ರ ನೀಡಲಾಗಿದೆ. ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸುವ ಸ್ವತಂತ್ರ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ. ಈ ಅಧಿಕಾರ ಸಂಪೂರ್ಣವಾಗಿ ಭಾರತ ಚುನಾವಣಾ ಆಯೋಗದ ವ್ಯಾಪ್ತಿಗೆ ಸೇರಿದೆ ಎಂದು ಶೋಭಾ ಕರಂದ್ಲಾಜೆ ಪ್ರತಿಪಾದಿಸಿದ್ದಾರೆ.
ಹೀಗಾಗಿ ಜಿಬಿಎ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಚುನಾವಣಾ ಆಯೋಗ ಕೈಗೊಂಡಿರುವ ಸಮಾನಾಂತರ ಎಸ್ಐಆರ್ ಪ್ರಕ್ರಿಯೆ ಸಂವಿಧಾನಾತ್ಮಕ ಹಾಗೂ ಕಾನೂನುಬದ್ಧ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಪ್ರಕ್ರಿಯೆಯಿಂದ ಅನಗತ್ಯ ಕೆಲಸದ ಪುನರಾವರ್ತನೆ, ಸಾರ್ವಜನಿಕ ಹಣದ ದುರುಪಯೋಗ, ಆಡಳಿತಾತ್ಮಕ ಗೊಂದಲ ಹಾಗೂ ಮತದಾರರ ಪಟ್ಟಿಯ ವಿಶ್ವಾಸಾರ್ಹತೆ ಕುರಿತು ಅನುಮಾನಗಳು ಮೂಡುವ ಸಾಧ್ಯತೆ ಇದೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ತಿಳಿಸಿದ್ದಾರೆ.



