ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಮಳಲಿ ಬೈಪಾಸ್‌ನಲ್ಲಿರುವ ಹೇಮಾವತಿ ಸೇತುವೆಯಿಂದ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಅಗ್ನಿಶಾಮಕದಳ ಹಾಗೂ ಪೊಲೀಸರು ಜೀವಂತವಾಗಿ ರಕ್ಷಿಸಿರುವ ಘಟನೆ ನಡೆದಿದೆ.
ಹಾಸನ ಮೂಲದ ಚಿರಂತ್ (38) ರಾಷ್ಟ್ರೀಯ ಹೆದ್ದಾರಿ-75ರ ಬಿಎಂ ರಸ್ತೆಯಲ್ಲಿರುವ ಹೇಮಾವತಿ ಸೇತುವೆಯಿಂದ ನದಿಗೆ ಹಾರಿದ್ದಾರೆ. ಇದನ್ನು ಕಂಡ ಸ್ಥಳೀಯರು ಕೂಡಲೇ ಸಕಲೇಶಪುರ ನಗರ ಪೊಲೀಸರಿಗೆ ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕಾಗಮಿಸಿದ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ ವೇಳೆ, ನದಿಯಲ್ಲಿ ನೀರಿನ ಮಟ್ಟ ಕಡಿಮೆಯಿದ್ದ ಕಾರಣ ಚಿರಂತ್ ಮರಳಿನ ಮೇಲೆ ಬಿದ್ದಿರುವುದು ಪತ್ತೆಯಾಗಿದೆ. ಕೂಡಲೇ ಅವರನ್ನು ಮೇಲಕ್ಕೆ ಎತ್ತಿ ಸುರಕ್ಷಿತವಾಗಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿರಂತ್ ಆತ್ಮಹತ್ಯೆಗೆ ಯತ್ನಿಸಿರುವ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಪ್ರಕರಣ ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.



