HomeKarnataka Newsಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: SIR ಪ್ರಕ್ರಿಯೆ ಕುರಿತು ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: SIR ಪ್ರಕ್ರಿಯೆ ಕುರಿತು ಪ್ರಿಯಾಂಕ್ ಖರ್ಗೆ ವಾಗ್ದಾಳಿ

For Dai;y Updates Join Our whatsapp Group

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪಗಳಾಗಿದ್ದರೆ ಕ್ರಮ ಕೈಗೊಳ್ಳುವುದು ಚುನಾವಣಾ ಆಯೋಗದ ಜವಾಬ್ದಾರಿಯೇ ಹೊರತು ರಾಜ್ಯ ಸರ್ಕಾರದ್ದಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, “ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ? ಅವರದ್ದೇ ತಾನೆ ಜವಾಬ್ದಾರಿ. ಕಾನೂನು ಮೀರಿ ಯಾರೂ ಏನೂ ಮಾಡಲು ಸಾಧ್ಯವಿಲ್ಲ. ಚುನಾವಣಾ ಆಯೋಗದ ವೀಕ್ಷಕರು ಇದ್ದಾರೆ. ಎಲ್ಲಿಯಾದರೂ ಲೋಪ ಕಂಡುಬಂದರೆ ಆಯೋಗವೇ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

ರಾಜ್ಯ ಸರ್ಕಾರ ಯಾರಿಗೂ ಒತ್ತಾಯಪೂರ್ವಕವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಸುವಂತೆ ಸೂಚಿಸಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಸಮುದಾಯ ಭವನಗಳಲ್ಲಿ ಅಥವಾ ಸರ್ಕಾರಿ ಕಚೇರಿಗಳಲ್ಲಿ ಎಸ್‌ಐಆರ್ ನಡೆಸಬೇಕು ಎಂದು ನಾವು ನಿರ್ದೇಶನ ನೀಡಿಲ್ಲ. ಆದರೆ ಈ ಪ್ರಕ್ರಿಯೆ ಬಗ್ಗೆ ಜನರಲ್ಲಿ ಆತಂಕ ಮತ್ತು ಗೊಂದಲ ಇರುವುದಂತೂ ನಿಜ” ಎಂದರು.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ 12 ಪ್ರಶ್ನೆಗಳನ್ನು ಕೇಳಿದ್ದರೂ ಇದುವರೆಗೆ ಯಾವುದೇ ಉತ್ತರ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, “ಜನರಲ್ಲಿ ಅನುಮಾನ ಮತ್ತು ಆತಂಕ ಮೂಡಿದರೆ ಅದಕ್ಕೆ ಉತ್ತರಿಸಬೇಕಾದವರು ಚುನಾವಣಾ ಆಯೋಗವೇ. ನಿಯಮ ರೂಪಿಸುವುದು ರಾಜ್ಯ ಸರ್ಕಾರವಲ್ಲ” ಎಂದು ಹೇಳಿದರು.

ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಆಡಳಿತಾತ್ಮಕವಾಗಿ ರಾಜ್ಯ ಸರ್ಕಾರದ ಅಧೀನದಲ್ಲಿದ್ದರೂ, ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ನಿರ್ದೇಶನಗಳನ್ನು ನೀಡುವುದು ಚುನಾವಣಾ ಆಯೋಗವೇ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು. “ಎಸ್‌ಐಆರ್ ಸರಿಯಾಗಿ ನಡೆಯುತ್ತಿಲ್ಲವೆಂದರೆ ಕ್ರಮ ಕೈಗೊಳ್ಳಬೇಕಾದ ಹೊಣೆಗಾರಿಕೆಯೂ ಆಯೋಗದ್ದೇ” ಎಂದರು.

ಬಿಎಲ್‌ಒಗಳ ಫೋಟೋ ಬಳಕೆಯ ವಿವಾದದ ಕುರಿತು ಪ್ರತಿಕ್ರಿಯಿಸಿದ ಅವರು, “ಎಲ್ಲಾ ರಾಜಕೀಯ ಪಕ್ಷಗಳ ಬಿಎಲ್‌ಒಗಳು ಮತದಾರರ ನೋಂದಣಿಗಾಗಿ ಕೆಲಸ ಮಾಡುತ್ತಿದ್ದಾರೆ. ಫೋಟೋ ಬಳಕೆಗೆ ಸಂಬಂಧಿಸಿದಂತೆ ಕೆಲವು ಮಾನದಂಡಗಳಿವೆ. ಅವುಗಳನ್ನು ಪಾಲಿಸಬೇಕು” ಎಂದು ಹೇಳಿದರು.

ಎಸ್‌ಐಆರ್ ಪ್ರಕ್ರಿಯೆ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಈಗ ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದ ಜನರಲ್ಲಿ ಆತಂಕ ಹೆಚ್ಚಾಗಿದೆ. ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಪಟ್ಟಿ ಇದ್ದರೆ ಮಾತ್ರ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಸಿಗುತ್ತವೆ ಎಂಬ ಗೊಂದಲವೂ ಸೃಷ್ಟಿಯಾಗಿದೆ. ಈ ರೀತಿಯ ಅನುಮಾನಗಳನ್ನು ನಿವಾರಿಸುವ ಹೊಣೆಗಾರಿಕೆ ಚುನಾವಣಾ ಆಯೋಗದ್ದಾಗಿದೆ” ಎಂದು ಹೇಳಿದರು.

ಚುನಾವಣಾ ಆಯೋಗದೊಂದಿಗೆ ಚರ್ಚಿಸಲು ಸಮಯ ಕೋರಿದ್ದರೂ ಅವಕಾಶ ಸಿಗುತ್ತಿಲ್ಲ ಎಂದು ಆರೋಪಿಸಿದ ಪ್ರಿಯಾಂಕ್ ಖರ್ಗೆ, ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲ ಗೊಂದಲಗಳಿಗೆ ಆಯೋಗವೇ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img