ಉಡುಪಿ: ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾದ ಆಗುಂಬೆ ಘಾಟ್‌ನಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಭೂಕುಸಿತದ ಆತಂಕ ಹೆಚ್ಚಾಗಿದೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 169ಎ (ತೀರ್ಥಹಳ್ಳಿ–ಮಲ್ಪೆ ರಸ್ತೆ) ವ್ಯಾಪ್ತಿಯ ಆಗುಂಬೆ ಘಾಟ್ ಭಾಗದಲ್ಲಿ ಮಣ್ಣು ತೇವಗೊಂಡಿರುವುದರಿಂದ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆ ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಜಿಲ್ಲಾಡಳಿತದ ಆದೇಶದ ಪ್ರಕಾರ ಸೆಪ್ಟೆಂಬರ್ 30ರವರೆಗೆ ಘಾಟ್ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಭಾರಿ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿಗಳು ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದು, ನಿಗದಿತ ಮಾನದಂಡಗಳನ್ನು ಪೂರೈಸುವ ವಾಹನಗಳಿಗೆ ಮಾತ್ರ ಮುಂದಿನ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ.



