ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್-2026) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯಿತಿ, ತಾಲೂಕು ಆಡಳಿತ, ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶುಕ್ರವಾರ ಪಟ್ಟಣದಲ್ಲಿ ಬೈಕ್ ರ್ಯಾಲಿ ಆಯೋಜಿಸಲಾಯಿತು.
ತಹಸೀಲ್ದಾರ್ ಕಚೇರಿಯಿಂದ ಆರಂಭವಾದ ರ್ಯಾಲಿಯು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಸ್ ನಿಲ್ದಾಣದಲ್ಲಿ ಸಮಾರೋಪಗೊಂಡಿತು. ಈ ವೇಳೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತದಾರರ ಜಾಗೃತಿ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ರ್ಯಾಲಿ ಬಳಿಕ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ ಬೆಣ್ಣೆ, ಜೂನ್ 30ರಿಂದ ಜುಲೈ 29ರವರೆಗೆ ನಡೆಯುವ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ನಾಗರಾಜ ಹಳ್ಳಿಕೇರಿ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಎಲ್ಲ ಅರ್ಹರ ಹೆಸರು ಸೇರ್ಪಡೆಯಾಗುವಂತೆ ವಿವಿಧ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಿರಸ್ತೆದಾರ ಚಿದಾನಂದ, ತಾಲೂಕು ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಜಗದೀಶ ಐರಣಿ, ಶಿಕ್ಷಕರ ಸಂಘದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಭಾಗವಹಿಸಿದ್ದರು.
“ನಿಖರ ಮತದಾರರ ಪಟ್ಟಿಯ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಬಿಎಲ್ಒಗಳಿಗೆ ಸರಿಯಾದ ಮಾಹಿತಿ ನೀಡಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು.”
– ವಿಜಯಕುಮಾರ ಬೆಣ್ಣೆ, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ಮುಂಡರಗಿ



