ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ 50% ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ನೀಡಿರುವ ಅವಕಾಶಕ್ಕೆ ಬೆಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜೂನ್ 21ರಿಂದ ಆರಂಭವಾದ ಈ ಯೋಜನೆಯಡಿ ಜುಲೈ 4ರವರೆಗೆ ಒಟ್ಟು 6,06,032 ಪ್ರಕರಣಗಳು ಇತ್ಯರ್ಥಗೊಂಡಿವೆ. ಈ ಅವಧಿಯಲ್ಲಿ ವಿವಿಧ ವಿಧಾನಗಳ ಮೂಲಕ ಒಟ್ಟು 18,15,42,200 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.
ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಜುಲೈ 10ರವರೆಗೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.
ನಗರದ ಪ್ರಮುಖ ಜಂಕ್ಷನ್ಗಳಲ್ಲಿ ಪಿಎಸ್ಐ ಸೇರಿದಂತೆ ಸಂಚಾರ ಪೊಲೀಸರನ್ನು ನಿಯೋಜಿಸಲಾಗಿದ್ದು, ದಂಡ ಪಾವತಿಗೆ ಸಹಾಯ ಮಾಡುವ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಸಂಚಾರಿ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವೂ ನಡೆಯುತ್ತಿದೆ.
ನಿಯಮ ಉಲ್ಲಂಘನೆಗಳನ್ನು ಕಡಿಮೆ ಮಾಡುವುದರ ಜೊತೆಗೆ ಬಾಕಿ ಇರುವ ದಂಡವನ್ನು ವಸೂಲಿ ಮಾಡುವ ಉದ್ದೇಶದಿಂದ ಈ ವಿಶೇಷ ಅಭಿಯಾನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.



