ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆಯ ಅಬ್ಬರ ಮುಂದುವರಿಯಲಿದ್ದು, ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಜುಲೈ 9 ಮತ್ತು 10ರಂದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 9ರಂದು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 8 ಮತ್ತು 9ರಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಳಕಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋ ಮೀಟರ್ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್:
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಉತ್ತಮ ಮಳೆಯ ನಿರೀಕ್ಷೆ ಇದೆ.
ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ:
ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದಲ್ಲದೆ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



