ವಿಜಯಪುರ: ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ನೀರಿನ ಹರಿವು ಹೆಚ್ಚಾಗಿದೆ.
ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೂ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ರೈತರು ಹಾಗೂ ಜನರಲ್ಲಿ ಸಂತಸ ಮೂಡಿದೆ.
ಮಹಾರಾಷ್ಟ್ರದಲ್ಲಿ ಮಳೆ ಆರಂಭವಾಗುವ ಮೊದಲು ಆಲಮಟ್ಟಿಯ ಲಾಲಬಹದ್ದೂರ್ ಶಾಸ್ತ್ರಿ ಜಲಾಶಯದಲ್ಲಿ ಕೇವಲ 2 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಇದೀಗ ಮಳೆ ಹೆಚ್ಚಾದ ಪರಿಣಾಮ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ.
123.081 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯದ ಆಲಮಟ್ಟಿ ಜಲಾಶಯದಲ್ಲಿ ಸದ್ಯ 25.536 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ಪ್ರಸ್ತುತ 80,445 ಕ್ಯೂಸೆಕ್ ಒಳಹರಿವು ದಾಖಲಾಗಿದೆ.
ಕಳೆದ ಕೆಲ ದಿನಗಳಿಂದ ನೀರಿನ ಕೊರತೆಯಿಂದ ಆತಂಕದಲ್ಲಿದ್ದ ಜನರು, ಇದೀಗ ಜಲಾಶಯಕ್ಕೆ ನೀರು ಹರಿದು ಬರುತ್ತಿರುವುದರಿಂದ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಉತ್ತಮ ಮಳೆ ಮುಂದುವರಿದರೆ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆ ಇದೆ.



