ಮಂಡ್ಯ: ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಲಾಶಯಕ್ಕೆ ಸದ್ಯ 7,531 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನಿನ್ನೆ ಬೆಳಗ್ಗೆ 5,734 ಕ್ಯೂಸೆಕ್ ಇದ್ದ ಒಳಹರಿವು ಇಂದು ಹೆಚ್ಚಳವಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ.
124.80 ಅಡಿ ಗರಿಷ್ಠ ಮಟ್ಟದ ಕೆಆರ್ಎಸ್ ಜಲಾಶಯದಲ್ಲಿ ಸದ್ಯ 81.55 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಒಟ್ಟು ಸಾಮರ್ಥ್ಯ 49.452 ಟಿಎಂಸಿ ಇದ್ದು, ಪ್ರಸ್ತುತ 12.485 ಟಿಎಂಸಿ ನೀರು ಸಂಗ್ರಹವಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆ ಇದೆ.



