ಬೆಂಗಳೂರು: ಕನ್ನಡ ಭಾಷೆ ಕುರಿತು ನಟ ಹಾಗೂ ರಾಜ್ಯಸಭಾ ಸದಸ್ಯ ಕಮಲ್ ಹಾಸನ್ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಖಾಸಗಿ ದೂರನ್ನು ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.
2025ರ ಮೇ ತಿಂಗಳಲ್ಲಿ ‘ಥಗ್ ಲೈಫ್’ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್, “ತಮಿಳು ಭಾಷೆಯೇ ಕನ್ನಡ ಭಾಷೆಯ ತಾಯಿ” ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕರ್ನಾಟಕದಲ್ಲಿ ವ್ಯಾಪಕ ವಿವಾದಕ್ಕೆ ಕಾರಣವಾಗಿದ್ದು, ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.
ಈ ಸಂಬಂಧ ಆರಂಭದಲ್ಲಿ ಕನಕಪುರ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಆದರೆ ಇತ್ತೀಚೆಗೆ ಕಮಲ್ ಹಾಸನ್ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ,
ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುವ ಬೆಂಗಳೂರಿನ 42ನೇ ವಿಶೇಷ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ನಿಗದಿಪಡಿಸಿ ಮುಂದೂಡಿದೆ.



