ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ನ ಬಳಗಾರ್ ಬಳಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಡ ಮೂಲದ ಆರು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಧರ್ಮಸ್ಥಳ ಹಾಗೂ ಚಿಕ್ಕಮಗಳೂರು ಪ್ರವಾಸಕ್ಕೆ ತೆರಳಿದ್ದ ತೂಫಾನ್ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ನಡೆದಿದೆ.
ಪೊಲೀಸರ ಮಾಹಿತಿ ಪ್ರಕಾರ, ಧಾರವಾಡದ ನಿವಾಸಿಗಳಾದ ಒಟ್ಟು ಒಂಬತ್ತು ಮಂದಿ ತೂಫಾನ್ ಕ್ರೂಸರ್ ವಾಹನದಲ್ಲಿ ಬುಧವಾರ ರಾತ್ರಿ ಪ್ರವಾಸಕ್ಕೆ ಹೊರಟಿದ್ದರು. ಇವರೆಲ್ಲರೂ ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅರಬೈಲ್ ಘಾಟ್ನ ಬಳಗಾರ್ ಸಮೀಪ ತಲುಪುತ್ತಿದ್ದಂತೆ ಎದುರಿನಿಂದ ಬಂದ ಲಾರಿ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಮತ್ತೋರ್ವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ್ (26), ಅಭಿಷೇಕ್ (26), ಸಂಜೀವ್ ಅಂಗಡಿ ಹಾಗೂ ಮತ್ತೋರ್ವ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಶಿವರಾಜ್ ದುರ್ಗಪ್ಪ ಮಡಿವಾಳ್ (22), ಮಂಜುನಾಥ್ ಅಶೋಕ್ ಚುಲಕಿ (32), ಸಚಿನ್ ಹಾಗೂ ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ್ (28) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಾಲ್ವರೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಈ ದುರ್ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಧಾರವಾಡದಲ್ಲಿರುವ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರವಾಸದ ಸಂಭ್ರಮ ಕ್ಷಣಾರ್ಧದಲ್ಲಿ ಶೋಕವಾಗಿ ಮಾರ್ಪಟ್ಟಿದೆ.



