ಉಡುಪಿ: ಮಣಿಪಾಲದ ಕೊಡಂಗೆಯಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.
ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಏಳು ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮಣಿಪಾಲದ ಖಾಸಗಿ ಶಾಲೆಗೆ ಸೇರಿದ ಬಸ್ ಮಕ್ಕಳನ್ನು ಕರೆದುಕೊಂಡು ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಿದ್ದಿದೆ ಎನ್ನಲಾಗಿದೆ.
ಬಸ್ನಲ್ಲಿದ್ದ ವಿದ್ಯಾರ್ಥಿಗಳ ಪೈಕಿ ಓರ್ವನ ತಲೆಗೆ ತೀವ್ರ ಪೆಟ್ಟಾಗಿದ್ದು, ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಗತ್ಯ ಚಿಕಿತ್ಸೆ ನೀಡಲಾಗಿದೆ.
ಅಪಘಾತದ ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ನಿಂತಿದ್ದ ಇತರ ಮಕ್ಕಳು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಕ್ಕೆ ನೆರವಾಗಿದ್ದಾರೆ.
ಘಟನೆ ಕುರಿತು ಮಣಿಪಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.



