HomeUncategorizedಮಳೆ ಕೊರತೆಯ ನಡುವೆ ಗ್ರಾಮೀಣರಿಗೆ ಉದ್ಯೋಗ ಭರವಸೆ: ವಿಬಿ-ಜಿ ರಾಮ್ (ಜಿ) ಯೋಜನೆ ಜಾರಿ

ಮಳೆ ಕೊರತೆಯ ನಡುವೆ ಗ್ರಾಮೀಣರಿಗೆ ಉದ್ಯೋಗ ಭರವಸೆ: ವಿಬಿ-ಜಿ ರಾಮ್ (ಜಿ) ಯೋಜನೆ ಜಾರಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ರೋಣ: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಮಂದಗತಿಯಲ್ಲಿ ಸಾಗುತ್ತಿರುವ ನಡುವೆಯೇ ಗ್ರಾಮೀಣ ಕೂಲಿಕಾರರಿಗೆ ಆಸರೆಯಾಗುವ ವಿಬಿ-ಜಿ ರಾಮ್ (ಜಿ) ಯೋಜನೆ ಅನುಷ್ಠಾನಕ್ಕೆ ರೋಣ ಹಾಗೂ ಗಜೇಂದ್ರಗಡ ತಾಲೂಕುಗಳಲ್ಲಿ ಸಿದ್ಧತೆಗಳು ವೇಗ ಪಡೆದಿವೆ. ಗ್ರಾಮೀಣ ಕುಟುಂಬಗಳಿಗೆ ತಮ್ಮ ಗ್ರಾಮದಲ್ಲೇ ಉದ್ಯೋಗ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಈ ಯೋಜನೆಯಡಿ ದಿನಕ್ಕೆ ₹382 ಕೂಲಿ ಹಾಗೂ ವರ್ಷಕ್ಕೆ 125 ದಿನಗಳ ಕೌಶಲರಹಿತ ಉದ್ಯೋಗ ಖಾತರಿ ನೀಡಲಾಗುತ್ತಿದೆ.

ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆ ಸುರಿಯದ ಕಾರಣ ಹಲವು ಗ್ರಾಮಗಳಲ್ಲಿ ಕೃಷಿ ಕೆಲಸಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಆರಂಭವಾಗಿಲ್ಲ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಕೂಲಿಕಾರರಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ದೊರೆಯುವ ನಿರೀಕ್ಷೆ ಮೂಡಿದ್ದು, ಯೋಜನೆ ಕುಟುಂಬಗಳ ಆದಾಯಕ್ಕೆ ಆಸರೆಯಾಗಲಿದೆ.

ಯೋಜನೆಯ ಮೊದಲ ಹಂತದಲ್ಲಿ ಈಗಾಗಲೇ ಇ-ಕೆವೈಸಿ ಪೂರ್ಣಗೊಳಿಸಿರುವ ಹಳೆಯ ನರೇಗಾ ಜಾಬ್ ಕಾರ್ಡ್‌ಗಳನ್ನೇ ಮಾನ್ಯಗೊಳಿಸಿ ಉದ್ಯೋಗ ನೀಡಲಾಗುತ್ತದೆ. ನಂತರ ಹಂತ ಹಂತವಾಗಿ ಅರ್ಹ ಕುಟುಂಬಗಳಿಗೆ ಹೊಸ ಗ್ರಾಮೀಣ ರೋಜ್‌ಗಾರ್ ಗ್ಯಾರಂಟಿ ಕಾರ್ಡ್ ವಿತರಿಸಲಾಗುತ್ತದೆ. ಈವರೆಗೆ ಯಾವುದೇ ಯೋಜನೆಯಲ್ಲಿ ನೋಂದಣಿಯಾಗದ ಕುಟುಂಬಗಳಿಗೂ ಹೊಸದಾಗಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ರೋಣ ಹಾಗೂ ಗಜೇಂದ್ರಗಡ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಯೋಜನೆ ಜಾರಿಗೆ ಅಗತ್ಯ ಪೂರ್ವಸಿದ್ಧತೆ ಪೂರ್ಣಗೊಂಡಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಗ್ರಾಮಸಭೆಗಳ ಮೂಲಕ ಕಾಮಗಾರಿಗಳ ಕ್ರಿಯಾ ಯೋಜನೆ ರೂಪಿಸುವ ಕಾರ್ಯ ನಡೆಯುತ್ತಿದೆ. ಜಲ ಸಂರಕ್ಷಣೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಜೀವನೋಪಾಯ ವೃದ್ಧಿ ಹಾಗೂ ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ.

ಯೋಜನೆಯಲ್ಲಿ ಪಾರದರ್ಶಕತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಕೆಲಸದ ಸ್ಥಳಗಳಲ್ಲಿ ಫೇಸ್ ಆಥೆಂಟಿಕೇಶನ್ ಮೂಲಕ ಹಾಜರಾತಿ, ಕಾರ್ಮಿಕರಿಗೆ ಸುರಕ್ಷಿತ ಕುಡಿಯುವ ನೀರು, ನೆರಳು, ವಿಶ್ರಾಂತಿ ಸೌಲಭ್ಯ ಹಾಗೂ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಒದಗಿಸುವ ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ.

ಕೃಷಿ ಹಂಗಾಮಿನಲ್ಲಿ ರೈತರಿಗೆ ಕಾರ್ಮಿಕರ ಕೊರತೆ ಉಂಟಾಗದಂತೆ ಬಿತ್ತನೆ ಹಾಗೂ ಕೊಯ್ಲಿನ ಅವಧಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದೆ, ಉಳಿದ ಅವಧಿಯಲ್ಲಿ ಹೆಚ್ಚಿನ ಕಾಮಗಾರಿಗಳನ್ನು ಆರಂಭಿಸಿ ಗ್ರಾಮೀಣ ಕುಟುಂಬಗಳಿಗೆ ನಿರಂತರ ಉದ್ಯೋಗ ಕಲ್ಪಿಸುವ ಗುರಿ ಹೊಂದಲಾಗಿದೆ.

“ವಿಬಿ-ಜಿ ರಾಮ್ (ಜಿ) ಯೋಜನೆ ಅನುಷ್ಠಾನಕ್ಕೆ ತಾಲೂಕು ಮಟ್ಟದಲ್ಲಿ ಅಗತ್ಯ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಲಾಗಿದ್ದು, ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಕಲ್ಪಿಸಲು ಕ್ರಮವಹಿಸಲಾಗಿದೆ. ಎಲ್ಲ ಅರ್ಹ ಕಾರ್ಮಿಕರು ಯೋಜನೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು.”

– ಚಂದ್ರಶೇಖರ ಬಿ. ಕಂದಕೂರ

ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ ರೋಣ ಹಾಗೂ ಗಜೇಂದ್ರಗಡ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img