ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಜುಲೈ 12ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಕೂಡ ಮಳೆಯಾಗುವ ನಿರೀಕ್ಷೆ ಇದೆ.
ಇನ್ನು ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ದಾಖಲೆ ಮಳೆ:
ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ತೋಟದೂರಿನಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 82 ಮಿ.ಮೀ. ಮಳೆಯಾಗಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆಲ್ಯಾಡಿಯಲ್ಲಿ 75.5 ಮಿ.ಮೀ., ಹಾಸನ ಜಿಲ್ಲೆಯ ಸಕಲೇಶಪುರದ ಹೊಗದಹಳ್ಳದಲ್ಲಿ 71.5 ಮಿ.ಮೀ., ಕೊಡಗಿನ ವಿರಾಜಪೇಟೆಯ ಬಿರುನಾನಿಯಲ್ಲಿ 71 ಮಿ.ಮೀ. ಮಳೆಯಾಗಿದೆ.
ಶಿವಮೊಗ್ಗದ ಆಗುಂಬೆಯಲ್ಲಿ 50 ಮಿ.ಮೀ., ಉತ್ತರ ಕನ್ನಡದ ಹೊನ್ನಾವರದ ನಗರಬಸ್ತಿಕೇರಿಯಲ್ಲಿ 43 ಮಿ.ಮೀ., ಉಡುಪಿ ಜಿಲ್ಲೆಯ ಕುಂದಾಪುರದ ಹೊಸಂಗಡಿಯಲ್ಲಿ 38 ಮಿ.ಮೀ. ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೋರಮಂಗಲದಲ್ಲಿ 36 ಮಿ.ಮೀ. ಮಳೆಯಾಗಿದೆ.



