ಹೈದರಾಬಾದ್: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿ, ಇಬ್ಬರು ಪುಟ್ಟ ಮಕ್ಕಳು ಹಾಗೂ ತನ್ನ ವಿರುದ್ಧ ದೂರು ನೀಡಿದ್ದ ಅಪ್ರಾಪ್ತ ಬಾಲಕಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ನಲ್ಲಿ ನಡೆದಿದೆ.
ರಾಜ್ಕುಮಾರ್ (35) ಎಂಬಾತ ಈ ಪ್ರಕರಣದ ಪ್ರಮುಖ ಆರೋಪಿ. ಆತ ತನ್ನ ಪತ್ನಿ ಪಾರ್ವತಿ ಸರಿತಾ (30) ಹಾಗೂ ನಾಲ್ಕು ಮತ್ತು ಒಂದು ವರ್ಷದ ಇಬ್ಬರು ಪುತ್ರರನ್ನು ಮನೆಯಲ್ಲಿ ಹತ್ಯೆ ಮಾಡಿದ್ದಾನೆ.
ಬಳಿಕ ತನ್ನ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿದ್ದ 17 ವರ್ಷದ ಬಾಲಕಿಯ ಮನೆಗೆ ತೆರಳಿ, ಆಕೆಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಬಾಲಕಿಯನ್ನು ಅಪಹರಿಸುವ ಮುನ್ನ ಆಕೆಯ 45 ವರ್ಷದ ತಾಯಿ ಹಾಗೂ 65 ವರ್ಷದ ಅಜ್ಜಿಯನ್ನೂ ಹತ್ಯೆ ಮಾಡಿದ್ದಾನೆ. ಘಟನೆಯ ವೇಳೆ ಮನೆಯಲ್ಲಿದ್ದ ಅಂಗವಿಕಲ 20 ವರ್ಷದ ಯುವತಿಗೆ ಯಾವುದೇ ಹಾನಿ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗಳ ಬಳಿಕ ರಾಜ್ಕುಮಾರ್ ತನ್ನ ತಂದೆಗೆ ಕರೆ ಮಾಡಿ ತಾನು ಆರು ಮಂದಿಯನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾನೆ. ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಪರಾರಿಯಾಗಿದ್ದಾನೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಪ್ರಕರಣ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ತರುಣ್ ಜೋಶಿ, ಆರೋಪಿಯ ಇರುವಿಕೆ ಕುರಿತು ಕೆಲವು ಸುಳಿವುಗಳು ಲಭ್ಯವಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಕುಮಾರ್ ಮತ್ತು ಪಾರ್ವತಿ 2018ರಲ್ಲಿ ಪ್ರೇಮ ವಿವಾಹವಾಗಿದ್ದರು. ಆರಂಭದಲ್ಲಿ ಗ್ರಾಮದ ಹೊರವಲಯದಲ್ಲಿ ವಾಸಿಸುತ್ತಿದ್ದ ದಂಪತಿ ನಂತರ ಶಾಬಾದ್ ಹಾಗೂ ದೇವಲಗುಡದಲ್ಲಿರುವ ಮನೆಗಳಲ್ಲಿ ನೆಲೆಸಿದ್ದರು.
ಈ ವರ್ಷದ ಮೇ ತಿಂಗಳಲ್ಲಿ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಜ್ಕುಮಾರ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಆತ ತಲೆಮರೆಸಿಕೊಂಡಿದ್ದರೂ, ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆ ವಿಧಿಸುವ ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದ್ದ ಕಾರಣ 20 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಮೇಲೆ ನಿರೀಕ್ಷಣಾ ಜಾಮೀನು ಪಡೆದಿದ್ದ.
ಆರೋಪಿಯ ಮಾನಸಿಕ ಸ್ಥಿತಿ ಸ್ಥಿರವಾಗಿರಲಿಲ್ಲ ಹಾಗೂ ಜೂಜಾಟದ ಚಟ ಮತ್ತು ಸಾಲದ ಸಮಸ್ಯೆಯಿಂದ ಬಳಲುತ್ತಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹಲವು ಬಾರಿ ಕೌನ್ಸೆಲಿಂಗ್ಗೆ ಕರೆಯಲಾಗಿದ್ದರೂ ಆತ ಹಾಜರಾಗಿರಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪತ್ನಿಯ ಶವ ಪತ್ತೆಯಾದ ಕೋಣೆಯಲ್ಲಿ ಹಲ್ಲೆ ನಡೆಸಿದ ಕುರುಹುಗಳು ಪತ್ತೆಯಾಗಿದ್ದು, ಮಕ್ಕಳು ನಿದ್ರೆಯಲ್ಲಿದ್ದಾಗಲೇ ಹತ್ಯೆಗೀಡಾಗಿರುವ ಸಾಧ್ಯತೆ ಇದೆ ಎಂದು ಸಂಬಂಧಿಕರು ಶಂಕಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಪೊಲೀಸರು ಹಾಗೂ ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿದಿದೆ.



