ಶಿವಮೊಗ್ಗ: ಸಹಜ ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವದಿಂದ ಬಾಣಂತಿ ಮೃತಪಟ್ಟ ಪ್ರಕರಣ ತೀರ್ಥಹಳ್ಳಿಯಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ವೈದ್ಯಕೀಯ ನಿರ್ಲಕ್ಷ್ಯದಿಂದಲೇ ಯುವತಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿರುವ ಕುಟುಂಬಸ್ಥರು ಜೆಸಿ ತಾಲೂಕು ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಹೊಸನಗರ ತಾಲೂಕಿನ ಶಾಖವಳ್ಳಿ ಗ್ರಾಮದ ಸುಮಾ (27) ಜುಲೈ 1ರಂದು ಆಸ್ಪತ್ರೆಗೆ ದಾಖಲಾಗಿದ್ದು, ಎರಡು ದಿನಗಳ ಬಳಿಕ ಸಹಜ ಹೆರಿಗೆ ನಡೆಸಲಾಗಿತ್ತು. ಹೆರಿಗೆಯ ನಂತರ ರಕ್ತಸ್ರಾವ ಹೆಚ್ಚಾಗಿ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಮೊದಲು ಮೆಗ್ಗಾನ್ ಆಸ್ಪತ್ರೆಗೆ, ನಂತರ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಮಾ ಮೃತಪಟ್ಟಿದ್ದಾರೆ. ನವಜಾತ ಶಿಶು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಪ್ರಕರಣದಲ್ಲಿ ವೈದ್ಯರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿರುವ ಕುಟುಂಬಸ್ಥರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅರಗ ಜ್ಞಾನೇಂದ್ರ, ಪ್ರಕರಣದ ಸಮಗ್ರ ತನಿಖೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.



