ರಾಮನಗರ: ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಮಂಡಲಹಳ್ಳಿ ಗ್ರಾಮದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಜೆಎಂಸಿ ಸರ್ವೆ ನಡೆಸಲು ಬಂದ ಅಧಿಕಾರಿಗಳಿಗೆ ಗ್ರಾಮಸ್ಥರು ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದು, ಅಧಿಕಾರಿಗಳ ವಾಹನವನ್ನು ಸುತ್ತುವರಿದು ಪೊರಕೆಯಿಂದ ಹಲ್ಲೆ ನಡೆಸಿದ ಘಟನೆ ಉದ್ವಿಗ್ನತೆಗೆ ಕಾರಣವಾಗಿದೆ.
ಬಿಡದಿ ತಾಲೂಕಿನ ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆ ಕೈಗೊಳ್ಳಲು ಅಧಿಕಾರಿಗಳು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ರೈತರು ಹಾಗೂ ರೈತ ಮಹಿಳೆಯರು ಸರ್ವೆಗೆ ಅವಕಾಶ ನಿರಾಕರಿಸಿದರು. ಯಾವುದೇ ಕಾರಣಕ್ಕೂ ಭೂಸರ್ವೆ ನಡೆಯಬಾರದು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಬಲವಂತವಾಗಿ ಮುಂದುವರಿದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಆದರೂ ಅಧಿಕಾರಿಗಳು ಸರ್ವೆಗೆ ಮುಂದಾದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತು. ರೈತರು ಅಧಿಕಾರಿಗಳ ಕಾರನ್ನು ಸುತ್ತುವರಿದು ತಡೆದರೆ, ರೈತ ಮಹಿಳೆಯರು ಪೊರಕೆಯಿಂದ ವಾಹನ ಹಾಗೂ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಆಕ್ರೋಶ ಹೊರಹಾಕಿದರು. ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದರೂ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸಪಡಬೇಕಾಯಿತು.
ಘಟನೆಯ ಬೆನ್ನಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಎಎಸ್ಪಿ ರಾಮಚಂದ್ರಯ್ಯ, ಡಿವೈಎಸ್ಪಿ ಗಿರೀಶ್ ಹಾಗೂ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಿದರು.
ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವುದು ಗಂಭೀರ ಅಪರಾಧ. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಶ್ರೀನಿವಾಸ ಗೌಡ ಸ್ಪಷ್ಟ ಎಚ್ಚರಿಕೆ ನೀಡಿದರು.



