ಬೆಂಗಳೂರು: ರಾಜ್ಯದ ಯುವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ. ಪ್ರತಿ ಸಂಘಕ್ಕೆ 10 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಈ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಹೇಳಿದರು.
ರಾಹುಲ್ ಗಾಂಧಿ ಅವರು ದೇಶದ ವೈವಿಧ್ಯಮಯ ಸಂಸ್ಕೃತಿ, ಏಕತೆ ಮತ್ತು ಇತಿಹಾಸದ ಸಂದೇಶವನ್ನು ಯುವಜನತೆಗೆ ತಲುಪಿಸುವ ಉದ್ದೇಶದಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 3 ಸಾವಿರ ಕಿಲೋಮೀಟರ್ಗೂ ಹೆಚ್ಚು ದೂರದ ‘ಭಾರತ್ ಜೋಡೋ ಯಾತ್ರೆ’ ಕೈಗೊಂಡಿದ್ದರು. ಆ ಯಾತ್ರೆಯ ನೆನಪಿಗಾಗಿ ವಿಶೇಷ ಕಾರ್ಯಕ್ರಮ ಜಾರಿಗೊಳಿಸುವ ಭರವಸೆಯನ್ನು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿತ್ತು. ಇದೀಗ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಯೋಜನೆಗೆ ಅಂತಿಮ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.
ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೂಲಕ ಅನುಷ್ಠಾನಗೊಳಿಸಲಾಗುತ್ತದೆ. ಯೋಜನೆ ಯಶಸ್ವಿಯಾಗಿ ಜಾರಿಯಾಗಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಕಾರ ನೀಡಲಿವೆ ಎಂದು ತಿಳಿಸಿದರು.
ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಸ್ಥಳೀಯ ಮಟ್ಟದಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ರಚಿಸಲು ಅಗತ್ಯವಾದ ಮಾರ್ಗಸೂಚಿಗಳನ್ನು ಜುಲೈ 13ರಂದು ಬಿಡುಗಡೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದರು.



