ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಸಚಿವ ಕೃಷ್ಣ ಬೈರೇಗೌಡ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಉತ್ತಮ ಆಡಳಿತಾತ್ಮಕ ಕೆಲಸವನ್ನು ಮೆಚ್ಚಲೇಬೇಕು ಎಂದು ಅವರು ಹೇಳಿದರು.
ಜೆಪಿ ಭವನದಲ್ಲಿ ಆಯೋಜಿಸಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡ, ಈ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ರಾಜಕೀಯವೇ ಬೇರೆ, ಮಾಡುವ ಕೆಲಸವೇ ಬೇರೆ. ಕೃಷ್ಣ ಬೈರೇಗೌಡ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಿಶೇಷವಾಗಿ ನಗರದಲ್ಲಿನ ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಹಾಗೂ ಅವರನ್ನು ಸೂಕ್ತ ಸ್ಥಳಗಳಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳು ಶ್ಲಾಘನೀಯವಾಗಿವೆ ಎಂದು ದೇವೇಗೌಡ ಹೇಳಿದರು.
ಸಾಮಾನ್ಯವಾಗಿ ಆಡಳಿತ ಪಕ್ಷದ ವಿರುದ್ಧ ತೀಕ್ಷ್ಣ ಟೀಕೆ ಮಾಡುವ ದೇವೇಗೌಡರು, ಈ ಬಾರಿ ರಾಜಕೀಯವನ್ನು ಮೀರಿ ಸಚಿವ ಕೃಷ್ಣ ಬೈರೇಗೌಡ ಅವರ ಸಾರ್ವಜನಿಕ ಹಿತಾಸಕ್ತಿಯ ಕೆಲಸವನ್ನು ಬಹಿರಂಗವಾಗಿ ಪ್ರಶಂಸಿಸಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.



