ಕೊಪ್ಪಳ: ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸದೆ ಕಾರ್ಯನಿರ್ವಹಿಸುತ್ತಿದ್ದ ಆರೋಪದ ಮೇಲೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಸಮೀಪದ ‘ಕಲ್ಯಾಣಿ ಸ್ಟೀಲ್ಸ್’ ಕಾರ್ಖಾನೆಯ ವಿರುದ್ಧ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಕಠಿಣ ಕ್ರಮಕ್ಕೆ ಮುಂದಾಗಿದೆ. ಕಾರ್ಖಾನೆಯನ್ನು ಸೀಜ್ ಮಾಡುವಂತೆ ಆದೇಶ ಹೊರಡಿಸಿರುವ ಬೆನ್ನಲ್ಲೇ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ವಿದ್ಯುತ್ ಸಂಪರ್ಕವನ್ನು ತಕ್ಷಣವೇ ಕಡಿತಗೊಳಿಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಪರಿಶೀಲನೆಯಲ್ಲಿ ಸಂಸ್ಥೆ ಪರಿಸರ ಸಂರಕ್ಷಣೆ ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ನಿಯಮಗಳನ್ನು ನಿರಂತರವಾಗಿ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ. ಇದರ ಆಧಾರದ ಮೇಲೆ ಕಾರ್ಖಾನೆಯ ಸಂಪೂರ್ಣ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಮೊದಲ ಹಂತವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿದೆ.
ಡಿಸಿ ಆದೇಶದ ತಕ್ಷಣ ಜೆಸ್ಕಾಂ ಅಧಿಕಾರಿಗಳ ತಂಡ ಕಾರ್ಖಾನೆ ಆವರಣಕ್ಕೆ ಭೇಟಿ ನೀಡಿ, ಹೈಟೆನ್ಷನ್ ವಿದ್ಯುತ್ ಸರಬರಾಜು ಸ್ಥಗಿತಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ.
ಗಮನಾರ್ಹವಾಗಿ, ಪರಿಸರ ಮಾಲಿನ್ಯ ಉಂಟುಮಾಡುವ ಕೈಗಾರಿಕೆಗಳ ವಿರುದ್ಧ ಕೊಪ್ಪಳ ಜಿಲ್ಲಾಡಳಿತ ನಡೆಸುತ್ತಿರುವ ಕಟ್ಟುನಿಟ್ಟಿನ ಕಾರ್ಯಾಚರಣೆಯಲ್ಲಿ ಇದು ನಾಲ್ಕನೇ ಪ್ರಮುಖ ಕಾರ್ಖಾನೆಯಾಗಿದೆ. ಈ ಹಿಂದೆ ಹೊಸಪೇಟೆ ಇಸ್ಪಾತ್ ಹಾಗೂ ಪಿಬಿಎಸ್–1 ಸೇರಿದಂತೆ ಹಲವು ಕೈಗಾರಿಕೆಗಳ ವಿರುದ್ಧವೂ ಇದೇ ಮಾದರಿಯ ಕಠಿಣ ಕ್ರಮ ಜಾರಿಗೊಳಿಸಲಾಗಿತ್ತು.



