ಕೋಲಾರ: ಕಸ ವಿಲೇವಾರಿ ಮಾಡುವ ವೇಳೆ ಎರಡು ಕಸ ಸಾಗಿಸುವ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಪೌರಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಮಹಿಳಾ ಪೌರಕಾರ್ಮಿಕರು ಗಾಯಗೊಂಡಿರುವ ಘಟನೆ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ.
ಶ್ರೀನಿವಾಸಪುರದ ಇಂದಿರಾನಗರದಲ್ಲಿ ಕಸ ವಿಲೇವಾರಿ ಕಾರ್ಯ ನಡೆಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಪೌರಕಾರ್ಮಿಕರಾದ ಸಂಪತ್ (35) ಹಾಗೂ ಭೂಲಕ್ಷ್ಮಿ ಗಾಯಗೊಂಡಿದ್ದರು.
ಗಾಯಗೊಂಡ ಇಬ್ಬರನ್ನೂ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಸಂಪತ್ ಅವರ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ.
ಭೂಲಕ್ಷ್ಮಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಘಟನೆ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣ ಏನೆಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೌರಕಾರ್ಮಿಕನ ಸಾವಿನಿಂದ ಪುರಸಭೆ ಸಿಬ್ಬಂದಿ ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.



