ಚಿಕ್ಕೋಡಿ: ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ SIR ಪ್ರಕ್ರಿಯೆಯನ್ನು ಒಂದೇ ಸ್ಥಳದಲ್ಲಿ ಕುಳಿತು ನಡೆಸಲಾಗುತ್ತಿದೆ ಎಂಬ ಆರೋಪ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೇಳಿಬಂದಿದೆ.
ಸಂಕೇಶ್ವರ ಪಟ್ಟಣದಲ್ಲಿ ಕೆಲವು BLO ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡದೆ ಸಮುದಾಯ ಭವನದಲ್ಲೇ ಕುಳಿತು SIR ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸರ್ಕಾರದ ನಿಯಮದಂತೆ ಮತದಾರರ ಮಾಹಿತಿ ಸಂಗ್ರಹಿಸಬೇಕಿದ್ದರೂ, ಅಧಿಕಾರಿಗಳು ಮನೆಗೆ ಭೇಟಿ ನೀಡದೆ ಫೋನ್ ಕರೆ ಮೂಲಕ ಮಾಹಿತಿ ಪಡೆದು ಅರ್ಜಿಗಳನ್ನು ಭರ್ತಿ ಮಾಡುತ್ತಿದ್ದಾರೆ ಎನ್ನಲಾಗಿದೆ.
ಈ ಕುರಿತು ಪ್ರಶ್ನಿಸಿದ ಸಾರ್ವಜನಿಕರಿಗೆ BLO ಅಧಿಕಾರಿಗಳು ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.



