HomeGadag Newsಐದು ವರ್ಷಗಳಿಂದ ನೀರಿನ ಘಟಕ ಬಂದ್; ಗ್ರಾಮಸ್ಥರ ಆಕ್ರೋಶ

ಐದು ವರ್ಷಗಳಿಂದ ನೀರಿನ ಘಟಕ ಬಂದ್; ಗ್ರಾಮಸ್ಥರ ಆಕ್ರೋಶ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಶಿರಹಟ್ಟಿ ತಾಲೂಕಿನ ಶಿವಾಜಿನಗರ (ಮಜ್ಜೂರ) ತಾಂಡಾದಲ್ಲಿ ಕಳೆದ ಐದು ವರ್ಷಗಳಿಂದ ಸ್ಥಗಿತಗೊಂಡಿರುವ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ದುರಸ್ತಿಪಡಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ವಕೀಲ ರವಿಕಾಂತ ಅಂಗಡಿ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ರವಿಕಾಂತ ಅಂಗಡಿ, ಸುಮಾರು 550 ಮನೆಗಳು ಹಾಗೂ 2,500ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ತಾಂಡಾದಲ್ಲಿ ಶುದ್ಧ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆಯೇ ಇಲ್ಲ. ಗ್ರಾಮಸ್ಥರು ಫ್ಲೋರೈಡ್ ಅಂಶ ಹೆಚ್ಚಿರುವ ಬೋರ್‌ವೆಲ್ ನೀರನ್ನೇ ಅವಲಂಬಿಸಿರುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಗ್ರಾಮದಲ್ಲಿರುವ ಎರಡು ಶುದ್ಧ ನೀರಿನ ಘಟಕಗಳು ಐದು ವರ್ಷಗಳಿಂದ ಸ್ಥಗಿತಗೊಂಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ನೀರು ಶುದ್ಧೀಕರಣ ಘಟಕಗಳನ್ನು ತಕ್ಷಣ ದುರಸ್ತಿಪಡಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದರೆ ಗ್ರಾಮಸ್ಥರೊಂದಿಗೆ ಕಾನೂನುಬದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಜಿಲ್ಲೆಯ ರೈತರು ಮಳೆ ಕೊರತೆಯಿಂದ ತೀವ್ರ ಸಂಕಷ್ಟದಲ್ಲಿದ್ದು, ಸರ್ಕಾರ ಕೂಡಲೇ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳೊಂದಿಗೆ ಚರ್ಚಿಸಿ ಎರಡು ದಿನಗಳೊಳಗೆ ಶುದ್ಧ ನೀರಿನ ಘಟಕಗಳನ್ನು ದುರಸ್ತಿಪಡಿಸಲಾಗುವುದು ಎಂದು ಭರವಸೆ ನೀಡಿದರು. ಬರಗಾಲ ಘೋಷಣೆ ಕುರಿತು ಸರ್ಕಾರದ ಗಮನಕ್ಕೆ ವಿಷಯ ತರುವುದಾಗಿ ತಿಳಿಸಿದರು. ಅಲ್ಲದೆ, ಬೆಳೆ ಸಾಲ ಪಡೆದ ರೈತರು ಸಮೀಪದ ಸಿಎಸ್‌ಸಿ ಕೇಂದ್ರಗಳಿಗೆ ತೆರಳಿ ಜುಲೈ 16ರೊಳಗೆ ಬೆಳೆ ವಿಮೆ ಪಾವತಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗಣೇಶ ಲಮಾಣಿ, ಭಾಪೂಜಿ ಲಮಾಣಿ, ಪ್ರಕಾಶ ಲಮಾಣಿ, ತುಕಾರಾಮ ಲಮಾಣಿ, ಕೇಶಪ್ಪ ಲಮಾಣಿ, ಅರುಣ ಲಮಾಣಿ, ಜಗದೀಶ ಲಮಾಣಿ, ರವಿ ಲಮಾಣಿ, ರಮೇಶ ಲಮಾಣಿ, ಸುರೇಶ ಲಮಾಣಿ ಸೇರಿದಂತೆ ಶಿವಾಜಿನಗರ (ಮಜ್ಜೂರ) ತಾಂಡಾದ ಗ್ರಾಮಸ್ಥರು ಉಪಸ್ಥಿತರಿದ್ದರು.

“ಐದು ವರ್ಷಗಳಿಂದ ಶುದ್ಧ ನೀರಿನ ಘಟಕಗಳು ಬಂದ್ ಆಗಿರುವುದು ಗ್ರಾಮಸ್ಥರ ದುರ್ದೈವ. ಹಲವು ಬಾರಿ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ. ಕೂಡಲೇ ದುರಸ್ತಿ ಮಾಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು.”

– ರಮೇಶ ಮಾನಪ್ಪ ಲಮಾಣಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img