ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗಳು ಮತ್ತು ರೈತರ ಪ್ರತಿಭಟನೆಗಳು ತೀವ್ರಗೊಂಡಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಯೋಜನೆಯ ಅನುಷ್ಠಾನವನ್ನು ಎರಡು ತಿಂಗಳ ಕಾಲ ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಈ ಅವಧಿಯಲ್ಲಿ ವಿಶೇಷ ಸಮಿತಿ ರಚಿಸಿ ವರದಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಸಣ್ಣ ಸಮಿತಿಯೊಂದನ್ನು ರಚಿಸಲಾಗುವುದು. ಸಮಿತಿ ಎರಡು ತಿಂಗಳೊಳಗೆ ವರದಿ ಸಲ್ಲಿಸಲಿದ್ದು, ಅದರ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಭೂಮಿ ನೀಡಲು ಇಚ್ಛೆ ಇರುವವರು ಸ್ವಯಂಪ್ರೇರಿತವಾಗಿ ನೀಡಬಹುದು. ನೀಡಲು ಇಚ್ಛಿಸದವರ ಮೇಲೆ ಯಾವುದೇ ಒತ್ತಡ ಇರುವುದಿಲ್ಲ. ಇದು ನಿರಂತರ ಪ್ರಕ್ರಿಯೆಯಾಗಿದ್ದು, ಸಮಿತಿಯ ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ಬಿಡದಿಯಲ್ಲಿ ನಡೆದ ಪ್ರತಿಭಟನೆ ಹಾಗೂ ಬೆಳವಣಿಗೆಗಳು ತಮ್ಮ ಮನಸ್ಸಿಗೆ ನೋವುಂಟು ಮಾಡಿವೆ ಎಂದು ಹೇಳಿದ ಮುಖ್ಯಮಂತ್ರಿ, “ಬಿಡದಿ ಟೌನ್‌ಶಿಪ್ ನನ್ನ ವೈಯಕ್ತಿಕ ಕನಸಿನ ಯೋಜನೆಯಲ್ಲ. ಈ ಯೋಜನೆಗೆ ನಾನು ಅಡಿಪಾಯ ಹಾಕಿಲ್ಲ. ನಾನು ಮುಖ್ಯಮಂತ್ರಿ ಆಗಿರುವುದನ್ನು ಕೆಲವರು ಸಹಿಸಿಕೊಳ್ಳಲಾಗದೆ ಅನಗತ್ಯ ವಿವಾದ ಸೃಷ್ಟಿಸುತ್ತಿದ್ದಾರೆ” ಎಂದು ಆರೋಪಿಸಿದರು.
“ನಾನು ರೈತನ ಮಗ. ರೈತರ ಶ್ರಮ, ಅವರ ಭೂಮಿಯ ಮಹತ್ವ ಮತ್ತು ನೋವು ನನಗೆ ಚೆನ್ನಾಗಿ ಗೊತ್ತಿದೆ. ರೈತರ ಹಿತಾಸಕ್ತಿಗೆ ಧಕ್ಕೆ ಉಂಟಾಗದಂತೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.



