ವಿಜಯಸಾಕ್ಷಿ ಸುದ್ದಿ, ಗದಗ: ಗದಗ ತಾಲೂಕಿನ ನರಸಾಪೂರ ಸರಹದ್ದಿನಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಕೈಬಿಡಬೇಕು ಹಾಗೂ ಹನಿ ನೀರಾವರಿ ಯೋಜನೆ ಹೆಸರಿನಲ್ಲಿ ರಾಜ್ಯ ಹೆದ್ದಾರಿಯಲ್ಲಿ ಕಾನೂನುಬಾಹಿರವಾಗಿ ಪೈಪ್‌ಲೈನ್ ಅಳವಡಿಸುತ್ತಿರುವುದನ್ನು ವಿರೋಧಿಸಿ ಜುಲೈ 17ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ ಬಣ) ಜಿಲ್ಲಾಧ್ಯಕ್ಷ ಎಂ.ಪಿ. ಪರ್ವತಗೌಡ್ರ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಟಗೇರಿ ಹೊರವಲಯದ ನಾಗಸಮುದ್ರ ಗ್ರಾಮದ ದಂಡಿನ ದುರ್ಗಾದೇವಿ ದೇವಸ್ಥಾನದ ಸಮೀಪ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ ಬಣ) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.
ಈಗಾಗಲೇ ನರಸಾಪೂರ ವ್ಯಾಪ್ತಿಯಲ್ಲಿ 160ಕ್ಕೂ ಹೆಚ್ಚು ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಂಡು ಕೈಗಾರಿಕೆ ಸ್ಥಾಪಿಸಿದೆ. ಇದೀಗ ಮತ್ತೆ 220 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರೈತರಿಗೆ ನೋಟಿಸ್ ನೀಡಲಾಗಿದೆ. ಇದರಿಂದ ರೈತರ ಬದುಕು ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗಲಿದ್ದು, ಸರ್ಕಾರ ತಕ್ಷಣವೇ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು. ಇಲ್ಲವಾದರೆ ಹೋರಾಟವನ್ನು ಮತ್ತಷ್ಟು ಉಗ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ವಿಜಯಕುಮಾರ ಸುಂಕದ ಮಾತನಾಡಿ, ಹನಿ ನೀರಾವರಿ ಕಾಮಗಾರಿಯ ಗುತ್ತಿಗೆದಾರರು ರಾಜ್ಯ ಹೆದ್ದಾರಿ ನಿಯಮಗಳನ್ನು ಉಲ್ಲಂಘಿಸಿ ಕಾಮಗಾರಿ ನಡೆಸುತ್ತಿದ್ದಾರೆ. ರಾಜ್ಯ ಹೆದ್ದಾರಿಯಿಂದ 40 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ನಡೆಸಬಾರದು ಎಂಬ ನಿಯಮವಿದ್ದರೂ ಪೈಪ್‌ಲೈನ್ ಅಳವಡಿಸಲಾಗುತ್ತಿದೆ. ಇದಕ್ಕೆ ಲೋಕೋಪಯೋಗಿ ಇಲಾಖೆ ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಎಂದು ಆರೋಪಿಸಿದರು.
ನಾಗಸಮುದ್ರದ ಐತಿಹಾಸಿಕ ದಂಡಿನ ದುರ್ಗಾದೇವಿ ದೇವಸ್ಥಾನದ 150ಕ್ಕೂ ಹೆಚ್ಚು ವರ್ಷಗಳಷ್ಟು ಹಳೆಯ ಬೇವಿನ ಮರದ ಸಮೀಪ ಆಳವಾಗಿ ಗುಂಡಿ ತೋಡಿರುವುದರಿಂದ ಮರಕ್ಕೆ ಅಪಾಯ ಎದುರಾಗಿದ್ದು, ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜು ಬಾಳಿಕಾಯಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸಯ್ಯ ಗುಡ್ಡಿಮಠ, ಬಸವರಾಜ ಮುಳ್ಳಾಳ, ಬಸವರಾಜ ಹೊನ್ನಪ್ಪನವರ, ಮಂಜುನಾಥ ಹೊನ್ನಪ್ಪನವರ, ಅಪ್ಪಣ್ಣ ಕಾಳೆ, ಸುರೇಶ ಪೂಜಾರ, ಸುರೇಶ ನಿಂಗಪ್ಪ ಪೂಜಾರ, ಕೆಂಪಣ್ಣ ಪೂಜಾರ, ಪರಶುರಾಮ ಗಾಯಕವಾಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ರೈತರ ಫಲವತ್ತಾದ ಭೂಮಿಯನ್ನು ಯಾವುದೇ ಕಾರಣಕ್ಕೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ. ರೈತರ ಬದುಕು ಉಳಿಸಲು ಅಗತ್ಯವಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ.”
– ಎಂ.ಪಿ. ಪರ್ವತಗೌಡ್ರ, ಜಿಲ್ಲಾಧ್ಯಕ್ಷ, ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ ಬಣ)



