HomeKarnataka NewsKPSC ಅಧ್ಯಕ್ಷರ ಅಮಾನತು ವಿವಾದ: ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಯತ್ನಾಳ್ ಆಗ್ರಹ

KPSC ಅಧ್ಯಕ್ಷರ ಅಮಾನತು ವಿವಾದ: ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಯತ್ನಾಳ್ ಆಗ್ರಹ

For Dai;y Updates Join Our whatsapp Group

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೇಳಿಬಂದಿರುವ ನಕಲಿ ಆದಾಯ ಪ್ರಮಾಣ ಪತ್ರ ಹಾಗೂ ನೇಮಕಾತಿ ಅಕ್ರಮ ಆರೋಪಗಳ ವಿಚಾರ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಈ ಸಂಬಂಧ ರಾಜ್ಯಪಾಲರು ಅವರನ್ನು ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿರುವ ಕ್ರಮದ ವಿರುದ್ಧ ಅವರು ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ಮುಂದುವರಿಸಿರುವ ಬೆನ್ನಲ್ಲೇ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿರುವ ಯತ್ನಾಳ್, ರಾಜ್ಯದ ಅತ್ಯುನ್ನತ ನೇಮಕಾತಿ ಸಂಸ್ಥೆಯ ಮುಖ್ಯಸ್ಥರ ಮೇಲೆಯೇ ಇಂತಹ ಗಂಭೀರ ಆರೋಪ ಕೇಳಿಬಂದಿರುವುದು ಆತಂಕಕಾರಿ ಎಂದು ಹೇಳಿದ್ದಾರೆ.

ಶಿವಶಂಕರಪ್ಪ ಸಾಹುಕಾರ್ ಅವರು ರಾಜ್ಯಪಾಲರ ಅಮಾನತು ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ, ಪ್ರಕರಣದಲ್ಲಿ ಮಧ್ಯಂತರ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ತಮ್ಮ ಪೋಸ್ಟ್‌ನಲ್ಲಿ ಯತ್ನಾಳ್, ಕೆಪಿಎಸ್‌ಸಿ ಅಧ್ಯಕ್ಷರಿಗೆ ವೇತನ, ಭತ್ಯೆ ಹಾಗೂ ಇತರ ಸೌಲಭ್ಯಗಳನ್ನು ಸೇರಿಸಿ ತಿಂಗಳಿಗೆ ಸುಮಾರು 2.25 ಲಕ್ಷ ರೂಪಾಯಿ, ವಾರ್ಷಿಕವಾಗಿ ಸುಮಾರು 27 ಲಕ್ಷ ರೂಪಾಯಿ ಆದಾಯ ದೊರೆಯುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಇಷ್ಟೊಂದು ಆದಾಯ ಹೊಂದಿದ್ದರೂ, ತಮ್ಮ ಪುತ್ರಿಗೆ ಹಿಂದುಳಿದ ವರ್ಗಗಳ ಮೀಸಲಾತಿ ಅಥವಾ ಸೌಲಭ್ಯ ದೊರೆಯುವ ಉದ್ದೇಶದಿಂದ ವಾರ್ಷಿಕ ಆದಾಯವನ್ನು ಕೇವಲ 40 ಸಾವಿರ ರೂಪಾಯಿ ಎಂದು ನಮೂದಿಸಿದ ಪ್ರಮಾಣ ಪತ್ರ ಸಲ್ಲಿಸಲಾಗಿದೆ ಎಂಬ ಆರೋಪ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ಇದು ಕೇವಲ ಕಾನೂನು ಉಲ್ಲಂಘನೆಯಷ್ಟೇ ಅಲ್ಲ, ಸ್ವಜನಪಕ್ಷಪಾತದ ಸ್ಪಷ್ಟ ಉದಾಹರಣೆ ಎಂದು ಆರೋಪಿಸಿರುವ ಅವರು, ಸರ್ಕಾರಿ ಉದ್ಯೋಗಕ್ಕಾಗಿ ಲಕ್ಷಾಂತರ ಯುವಕರು ಹಗಲು-ರಾತ್ರಿ ಶ್ರಮಿಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಅಂತಹ ಸಂದರ್ಭದಲ್ಲಿ ನೇಮಕಾತಿ ಸಂಸ್ಥೆಯ ಮುಖ್ಯಸ್ಥರ ಮೇಲೆಯೇ ಇಂತಹ ಆರೋಪಗಳು ಕೇಳಿಬಂದರೆ ಅರ್ಹ ಅಭ್ಯರ್ಥಿಗಳ ವಿಶ್ವಾಸಕ್ಕೆ ಧಕ್ಕೆ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಶ್ನೆಪತ್ರ ಸೋರಿಕೆ, ನೇಮಕಾತಿ ಅಕ್ರಮ ಹಾಗೂ ಸ್ವಜನಪಕ್ಷಪಾತದಂತಹ ಪ್ರಕರಣಗಳಿಂದ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ಆಡಳಿತ ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿಯುತ್ತಿದೆ ಎಂದು ಯತ್ನಾಳ್ ಕಳವಳ ವ್ಯಕ್ತಪಡಿಸಿದ್ದಾರೆ.

ಶಿವಶಂಕರಪ್ಪ ಸಾಹುಕಾರ್ ವಿರುದ್ಧದ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಯಾವುದೇ ರಾಜಕೀಯ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ ಸ್ವತಂತ್ರ ಮತ್ತು ಪಾರದರ್ಶಕ ತನಿಖೆ ನಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದ ಲಕ್ಷಾಂತರ ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಹಿತದೃಷ್ಟಿಯಿಂದ ಈ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ) ಗೆ ವಹಿಸಬೇಕು. ನೇಮಕಾತಿ ಅಕ್ರಮಗಳ ವಿಚಾರದಲ್ಲಿ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img